ಬೀದರ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾ ಧಿಕಾರಿ ಡಾ|ಎಚ್.ಆರ್. ಮಹಾದೇವ ಸೂಚಿಸಿದರು.
ನಗರದಲ್ಲಿ ಗುರುವಾರ ನಡೆದ ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಜೊತೆಗೆ ಕೂಡಲೇ ಕಾಮಗಾರಿಯ ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾ ಧಿಸಿರುವ ಬಗ್ಗೆ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುವಂತೆ ನಿರ್ದೇಶನ ನೀಡಿದರು.
ಕೆಆರ್‌ಐಡಿಎಲ್ ಅಧಿಕಾರಿ ಮಾತನಾಡಿ, ಕೆಲವೊಂದು ಗ್ರಾಮಗಳಲ್ಲಿ ಅಂಗನವಾಡಿ ಕಟ್ಟಡ, ಗ್ರಾಮ ಪಂಚಾಯತ್ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಎದುರಾಗಿದೆ ಎಂದು ತಿಳಿಸಿದಾಗ, ನಿವೇಶನ ಸಮಸ್ಯೆಯ ಕಾರಣದಿಂದಾಗಿ ಕಾಮಗಾರಿಗಳನ್ನು ಆರಂಭಿಸಲು ಸಾಧ್ಯವಾಗದೇ ಇದ್ದಲ್ಲಿ ಅಂತಹ ಕೆಲಸಗಳನ್ನು ಕೈಬಿಡುವಂತೆ ನಿರ್ದೇಶನ ನೀಡಿದರು.
ಅಲ್ಪಸಂಖ್ಯಾತರ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಪದವಿ ಪೂರ್ವ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯಬೇಕಾಗಿರುವ ಕೆಲವು ಕಾಮಗಾರಿಗಳನ್ನು ಇನ್ನೂ ಆರಂಭಿಸದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ ಜಿಲ್ಲಾ ಧಿಕಾರಿಯವರು, ಎಲ್ಲ ಕೆಲಸಗಳನ್ನು ಶೀಘ್ರ ಆರಂಭಿಸಬೇಕು. ಇಲ್ಲವಾದಲ್ಲಿ ಸಂಬಂ ಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ್, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.