ಬೀದರ: ಕೊರೊನಾ ವೈರಸ್ ಸೋಂಕು ಹರಡುವಿಕೆ ಮತ್ತು ನಿಯಂತ್ರಣ ಕ್ರಮಗಳ ಬಗ್ಗೆ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಧನರಾಜ ಬೋರಾಳೆ ಅವರು ತಾಲೂಕು ಮಟ್ಟದ ವಿವಿಧ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕೋರೋನಾ ವೈರಸ್ ಮುಂಜಾಗ್ರತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿರುವ ಎಲ್ಲ ಶಾಲಾ ಕಾಲೇಜುಗಳು, ವಸತಿ ನಿಲಯಗಳು, ಅಂಗನವಾಡಿ ಕೇಂದ್ರಗಳಲ್ಲಿ ಕೊರೋನಾ ವೈರಸ್ ಸೋಂಕು ಲಕ್ಷಣಗಳು ಮತ್ತು ರೋಗ ಬಾರದಂತೆ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮನವರಿಕೆ ಮಾಡಿಸಬೇಕು ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಶಿವಕುಮಾರ ಸಿದ್ದೇಶ್ವರ ಮಾತನಾಡಿ, ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ, ಸೋಂಕಿತ ವ್ಯಕ್ತಿಯ ಜೊತೆ ನಿಕಟ ಸಂಪರ್ಕದಲ್ಲಿರುವಾಗ, ಹಸ್ತ ಲಾಘವ ಮತ್ತು ಮುಟ್ಟುವಾಗ, ಸೋಂಕಿತರು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೇ ಬಳಸಿದಾಗ, ಸ್ವತ್ಛಗೊಳಿಸದ ಅಥವಾ ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು ಮತ್ತು ಬಾಯಿ ಮುಟ್ಟುವುದರಿಂದ ರೋಗ ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ಸಾಧ್ಯತೆ ಇರುತ್ತದೆ. ಈ ಸೋಂಕಿನ ಕುರಿತು ಯಾರೂ ಭಯ ಪಡದೇ ಮುಂಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ವೈಯಕ್ತಿಕ ಶುಚಿತ್ವದತ್ತ ಹೆಚ್ಚು ಗಮನ ನೀಡಬೇಕು. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಬೇಕು. ಅಸುರಕ್ಷಿತವಾದ ಕಾಡುಪ್ರಾಣಿ ಅಥವಾ ಸಾಕುಪ್ರಾಣಿಗಳನ್ನು ಮುಟ್ಟಬಾರದು. ಮಾಂಸ, ಮೊಟ್ಟೆಗಳನ್ನು ಸರಿಯಾಗಿ ಬೇಯಿಸಿ ಉಪಯೋಗಿಸಬೇಕು. ಸೋಂಕು ಪೀಡಿತರ ಸಂಪರ್ಕದಿಂದ ದೂರವಿರಬೇಕು. ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್ ಅಥವಾ ಕೈ ವಸ್ತ್ರ ಉಪಯೋಗಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು. ಉಸಿರಾಟದ ತೊಂದರೆ ಕಾಣಿಸಿದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯಬೇಕು. ರೋಗದ ಶಂಕೆಯಿದ್ದರೆ ಮನೆಯಲ್ಲಿಯೇ ಪ್ರತ್ಯೇಕವಾಗಿರಬೇಕು ಮತ್ತು ಟ್ರಿಪಲ್ ಲೇಯರ್ ಮಾಸ್ಕ್ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.
ಶಿಶು ಅಭಿವೃದ್ಧಿ ಯೋಜನಾಧಿ ಕಾರಿ ಗೌತಮ ಸಿಂಧೆ, ಕ್ಷೇತ್ರ ಶಿಕ್ಷಣಾಧಿ ಕಾರಿ ಮಹಮ್ಮದ್ ಗುಲ್ಶನ್, ತಾಪಂ ಸಹಾಯಕ ನಿರ್ದೇಶಕ ಶರತಕುಮಾರ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಅನೀಲಕುಮಾರ ಮೇಲ್ದೊಡ್ಡಿ, 35 ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿ ಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ನಿಲಯಗಳ ಮೇಲ್ವಿಚಾರಕರು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಸಭೆಯಲ್ಲಿದ್ದರು.