ಭೋಪಾಲ್: ಬುಡಕಟ್ಟು ವ್ಯಕ್ತಿಯ ಮೇಲೆ ಒಬ್ಬಾತ ಮೂತ್ರವಿಸರ್ಜನೆ ಮಾಡಿದ ವಿಡಿಯೋ ಭಾರೀ ವೈರಲ್ ಆದ ಬಳಿಕ ದೇಶಾದ್ಯಂತ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಮೂತ್ರವಿಸರ್ಜನೆ ಮಾಡಿದ್ದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎಂದು ತಿಳಿದ ಬಳಿಕ ಈ ಕೃತ್ಯ ರಾಜಕೀಯ ತಿರುವು ಪಡೆದಿತ್ತು. ಬಿಎಸ್‌ಪಿ ನಾಯಕಿ ಮಾಯಾವತಿ, ಹೋರಾಟಗಾರ ಜಿಗ್ನೇಶ್ ಮೇವಾನಿ ಸಹಿತ ಹಲವು ನಾಯಕರು ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದು, ಆರೋಪಿಯ ಮನೆಯನ್ನು ಬುಲ್ಡೋಜರ್ ಬಳಸಿ ಕೆಡಹುವಂತೆ ಆಗ್ರಹಿಸಿದ್ದರು. ಮಧ್ಯ ಪ್ರದೇಶ ಸರ್ಕಾರಕ್ಕೂ ಈ ಘಟನೆ ತೀವ್ರ ಮುಜುಗರ ತರಿಸಿತ್ತು.
ಈ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಧ್ಯ ಪ್ರದೇಶ ಸರ್ಕಾರ ಈಗಾಗಲೇ ಜೈಲು ಪಾಲಾಗಿರುವ ಆರೋಪಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲು ಆದೇಶ ಹೊರಡಿಸಿದೆ.
ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಈ ಘಟನೆ ʻಅಮಾನವೀಯ ಮತ್ತು ಖಂಡನೀಯʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ಮಧ್ಯರಾತ್ರಿಯೇ ಆರೋಪಿಯನ್ನು ಬಂಧಿಸಲಾಗಿದ್ದು, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನಿರ್ದೇಶನದಂತೆ ಆತನ ವಿರುದ್ಧ, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅದೂ ಅಲ್ಲದೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಆಸ್ಪತ್ರೆಯಲ್ಲಿ ಎಸಿ ರೂಮ್ ಬುಕ್ ಮಾಡಲಿಲ್ಲವೆಂದು ನಡುಬೀದಿಯಲ್ಲೇ ಹೊಡೆದಾಡಿಕೊಂಡ ಕುಟುಂಬ