Advertisement

ರೈಲ್ವೆ ಯೋಜನೆಗೆ ಭೂಸ್ವಾಧೀನಕ್ಕೆ ಉನ್ನತ ಸಮಿತಿ

03:45 AM Jan 03, 2017 | Team Udayavani |

ಬೆಂಗಳೂರು: ರೈಲ್ವೆ ಇಲಾಖೆ ಹಾಗೂ ರಾಜ್ಯ ಸರ್ಕಾರ ಸಹಭಾಗಿತ್ವದಡಿ ಕೈಗೆತ್ತಿಕೊಂಡಿರುವ ರೈಲ್ವೆ ಯೋಜನೆಗಳಿಗೆ ಅಗತ್ಯವಾದ ಜಮೀನು ಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವ ನಿಟ್ಟಿನಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಜತೆಗೆ ಭೂ ಸ್ವಾಧೀನ ವಿಚಾರದಲ್ಲಿ ಸಲಹೆ ಪಡೆಯಲು ತಜ್ಞರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ.

Advertisement

ಮೂಲಸೌಕರ್ಯ ಸಚಿವ ಆರ್‌.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ, ರೈಲ್ವೆ ಯೋಜನೆ, ವಿಮಾನ ನಿಲ್ದಾಣ, ಕೊಳವೆ ಮಾರ್ಗದಲ್ಲಿ ಅನಿಲ ಪೂರೈಕೆ ಯೋಜನೆಗಳ ಪ್ರಗತಿ ಪರಿಶೀಲಿಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.

ಭೂ ಸ್ವಾಧೀನ ಪ್ರಕ್ರಿಯೆ ವಿಳಂಬದಿಂದ ಯೋಜನೆ ಅನುಷ್ಠಾನಕ್ಕೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ವೇಗ ಹೆಚ್ಚಿಸಲು ಮೂಲಸೌಕರ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಪುನರ್ವಸತಿ ಮತ್ತು ಪರಿಹಾರ ವಿಭಾಗದ ಆಯುಕ್ತರನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಮಿತಿಯು ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ ನಿರಂತರ ಸಂಪರ್ಕದಲ್ಲಿದ್ದು, ಕಂದಾಯ ಹಾಗೂ ರೈಲ್ವೆ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಎದುರಾಗುವ ಸಮಸ್ಯೆಗಳನ್ನು ತಕ್ಷಣ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು. ಅದೇ ರೀತಿ ಭೂ ಸ್ವಾಧೀನಕ್ಕೆ ಅಗತ್ಯವಾದ ಹಣ ಬಿಡುಗಡೆ ಬಗ್ಗೆ ಗಮನಹರಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು. ಭೂ ಸ್ವಾಧೀನ ವಿಚಾರದಲ್ಲಿ ಎದುರಾಗುವ ಕಾನೂನು ಹಾಗೂ ಇತರೆ ಅಡ್ಡಿ ನಿವಾರಣೆಗೆಗಾಗಿ ಜಿಲ್ಲಾ ಮಟ್ಟದಲ್ಲಿ ಹಾಗೂ ಕೆಐಎಡಿಬಿ ಮಟ್ಟದಲ್ಲಿ ತಜ್ಞರನ್ನು ನೇಮಕ ಮಾಡಿಕೊಳ್ಳಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ಗದಗ-ವಾಡಿ, ಬಾಗಲಕೋಟೆ-ಕುಡಚಿ, ಬೀದರ್‌-ಕಲಬುರಗಿ, ತುಮಕೂರು-ದಾವಣಗೆರೆ, ತುಮಕೂರು-ರಾಯದುರ್ಗ, ಹಾಸನ-ಬೆಂಗಳೂರು, ಗಿಣಿಗೇರ-ರಾಯಚೂರು, ಕೋಲಾರ-ಮುಳಬಾಗಿಲು ಮತ್ತು ಮಾರಿಕುಪ್ಪಂ-ಕುಪ್ಪಂ ಮಾರ್ಗದ ರೈಲ್ವೆ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

Advertisement

ರೈಲ್ವೆ ಕೆಳಸೇತುವೆ ಮತ್ತು ಮೇಲ್ಸೇತುವೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ಲೋಕೋಪಯೋಗಿ ಇಲಾಖೆ ಮತ್ತು ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜತೆ ಸಹಕಾರ ಪಡೆದು ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಮೂಲಸೌಕರ್ಯ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

2016-17 ನೇಸಾಲಿನಲ್ಲಿ ರೈಲ್ವೆ ಯೋಜನೆಗಳಿಗಾಗಿ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನ ಸಮರ್ಪಕವಾಗಿ ವೆಚ್ಚ ಮಾಡಿ  ಈ ವರ್ಷಾಂತ್ಯಕ್ಕೆ ಪೂರ್ಣಗೊಳಿಸಬೇಕಾದ ಯೋಜನೆಗಳ ಬಗ್ಗೆ ಹೆಚ್ಚು ಒತ್ತು ನೀಡಿ ಎಂದು ತಿಳಿಸಿದರು.
ಸಭೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಹಾಗೂ ಕೆಳ ಸೇತುವೆ ನಿರ್ಮಾಣ, ಮಂಗಳೂರು ವಿಮಾನ ನಿಲ್ದಾಣ ಎರಡನೇ ಹಂತಕ್ಕೆ ಭೂ ಸ್ವಾಧೀನ ಮತ್ತು ತಗ್ಗು ಪ್ರದೇಶ ಸಮತಟ್ಟು ಮಾಡುವುದು, ಹುಬ್ಬಳ್ಳಿ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಮತ್ತು ಟರ್ಮಿನಲ್‌ ಕಾಮಗಾರಿ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಏರ್‌ಪೋರ್ಸ್‌ ಸ್ಟೇಷನ್‌ಗಾಗಿ 15 ಎಕರೆ ಜಮೀನು ಹಸ್ತಾಂತರ, ಹಾಸನ ವಿಮಾನ ನಿಲ್ದಾಣಕ್ಕೆ ಭೂ ಸ್ವಾಧೀನ, ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ 85.28 ಎಕರೆ ಜಮೀನು ಕುರಿತ ಕಾನೂನು ವಿವಾದ, ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣಗಳನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಡಿ ಅಭಿವೃದ್ಧಿಪಡಿಸುವುದು, ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಮಾವೇಶ ಭವನ ಮತ್ತು ಬಿಸಿನೆಸ್‌ ಪಾರ್ಕ್‌ ಸ್ಥಾಪನೆ, ಪೈಪ್‌ಲೈನ್‌ ಮೂಲಕ ಅಡುಗೆ ಅನಿಲ ಪೂರೈಕೆ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next