ಕಲಬುರಗಿ: ಭೀಮಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಜಿಲ್ಲೆಯಲ್ಲಿ ನಿರಂತರ ಮಳೆ ಮತ್ತು ಮಹಾರಾಷ್ಟ್ರದಿಂದ ಭೀಮಾ ನದಿಗೆ ನೀರು ಹರಿ ಬಿಟ್ಟಿರುವ ಕಾರಣ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ ನಿಂದ ಗುರುವಾರ 2.23 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಭೀಮಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹೀಗಾಗಿ ಬೀದರ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರದ್ದುಗೊಂಡಿದೆ.
ಸೇತುವೆ ಬಂದ್ ಮಾಡುವ ಮುನ್ಸೂಚನೆ ಇರದೇ ಪರಿಣಾಮ ಸೇತುವೆ ಬಳಿ ಬಂದ ಸಾರಿಗೆ ಸಂಸ್ಥೆ ಬಸ್ ಗಳು ಹಾಗೂ ಖಾಸಗಿ ವಾಹನಗಳು ಎರಡೂ ಬದಿ ಕಿಲೋ ಮೀಟರ್ ಗಟ್ಟಲೇ ನಿಂತಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸೇತುವೆ ಬಳಿ ಬರದಂತೆ ಧ್ವನಿವರ್ಧಕದ ಮೂಲಕ ಕೂಗಿ ಹೇಳುತ್ತಿದ್ದಾರೆ.
ಜೇವರ್ಗಿ ಶಾಸಕರಾದ ವಿಧಾನಸಭೆಯಲ್ಲಿನ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.