ಬೀದರ: ಕೋವಿಡ್-19 ಸೋಂಕು ತಗುಲದಂತೆ ಮುಂಜಾಗ್ರತೆಗಾಗಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಮಾಸ್ಕ್ ಧರಿಸದವಿರಗೆ ದಂಡ ವಿಧಿಸುವ ಕಾರ್ಯಾಚಾರಣೆ ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ತಹಶೀಲ್ದಾರ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ತಡೆಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕಾರ್ಯಾಚರಣೆ ವೇಗಗೊಳಿಸಬೇಕು. ಜಿಲ್ಲೆಯ ಎರಡು ನಗರಸಭೆಗಳು, ನಾಲ್ಕು ಪುರಸಭೆಗಳು ಮತ್ತು ಒಂದು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಾಚಾರಣೆ ತೀವ್ರಗೊಳ್ಳಬೇಕು. ನಿಯಮ ಉಲ್ಲಘಿಸಿದವರಿಗೆ ಯಾವುದೇ ಮುಲಾಜಿಲ್ಲದೇ ದಂಡ ವಿಧಿಸಿ ಚುರುಕು ಮುಟ್ಟಿಸಬೇಕು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಿಗೆ ಬರುವ ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಕುರಿತು ನಿತ್ಯ ವರದಿ ಸಲ್ಲಿಸಬೇಕು. ಈ ಮಾಹಿತಿ ಲಭ್ಯವಾದಲ್ಲಿ ಕೆಮ್ಮು, ನೆಗಡಿ, ಜ್ವರದಂತಹ ಲಕ್ಷಣಗಳಿರುವವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿ ಕೋವಿಡ್ ಹರಡದಂತೆ ನೋಡಿಕೊಳ್ಳಲು ಅನುಕೂಲವಾಗುತ್ತದೆ. ಈ ಬಗ್ಗೆ ಎಲ್ಲ ತಾಲೂಕಿನ ಖಾಸಗಿ ಆಸ್ಪತ್ರೆಗಳ ವೈದ್ಯರು ಗಮನ ಹರಿಸುವಂತೆ ತಾಲೂಕು ಆರೋಗ್ಯಾಧಿಕಾರಿಗಳು ಉಸ್ತುವಾರಿ ನೋಡಿಕೊಳ್ಳಬೇಕು. ಪ್ರತಿದಿನ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ಜರುಗಿಸಿ ವರದಿ ಸಲ್ಲಿಸಬೇಕು. ಜಿಲ್ಲಾ ಮಟ್ಟದಲ್ಲಿರುವ ಹಿರಿಯ ವೈದ್ಯಾಧಿಕಾರಿಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ ಮಾತನಾಡಿ, ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯಲ್ಲಿ ಐಎಲ್‌ಐ, ಸಾರಿ ಪ್ರಕರಣಗಳನ್ನು ಗುರುತಿಸಲು ಮನೆಮನೆ ಸಮೀಕ್ಷೆ ಕಾರ್ಯ ತೀವ್ರಗೊಳಿಸಬೇಕು. ಆ ಪ್ರದೇಶದಲ್ಲಿನ ಐಎಲ್‌ಐ, ಸಾರಿ ಪ್ರಕರಣಗಳು ಮತ್ತು ಗರ್ಭೀಣಿಯರು, ಹತ್ತು ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳು, 60 ವರ್ಷ ಮೇಲ್ಪಟ್ಟವರನ್ನು ಮತ್ತೆ ಹಚ್ಚಿ ಮುಂದಿನ ಕ್ರಮ ಜರುಗಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಎಸ್‌ಪಿ ಡಿ.ಎಲ್.ನಾಗೇಶ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ, ಭಂವರಸಿಂಗ್ ಮೀನಾ, ಡಿಎಚ್‌ಒ ಡಾ| ವಿ.ಜಿ.ರೆಡ್ಡಿ, ಬ್ರಿಮ್ಸ್ ನಿರ್ದೇಶಕ ಡಾ| ಶಿವಕುಮಾರ ಇತರರು ಇದ್ದರು.