ಬೀದರ: ಜಿಲ್ಲೆಯಲ್ಲಿ ಮಾ.27 ರಿಂದ ಏ. 9ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳನ್ನು ಶಾಂತಿಯುತ, ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್.ಮಹಾದೇವ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಸಿದ್ಧತೆ ಪರಿಶೀಲಿಸಬೇಕು. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಯಾವುದೇ ರೀತಿಯ ಸಮಸ್ಯೆಗಳು ಎದುರಿಸದಂತೆ ನೋಡಿಕೊಳ್ಳಬೇಕು. ಎಲ್ಲ ಪರೀಕ್ಷಾ
ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಪೀಠೊಪಕರಣ ಸಿದ್ಧಪಡಿಸಿಕೊಳ್ಳಬೇಕು ಎಂದರು.
ಪರೀಕ್ಷೆಯಲ್ಲಿ ಮೊಬೈಲ್, ಎಲ್ಲ ವಿಧದ ಕೈಗಡಿಯಾರ ನಿಷೇಧಿಸಲಾಗಿದೆ. ಹಾಗಾಗಿ ಸಿಬ್ಬಂದಿ ಒಳಗೊಂಡು ಯಾರೊಬ್ಬರೂ ಮೊಬೈಲ್ ತರುವಂತಿಲ್ಲ. ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗುತ್ತದೆ. ಪರೀಕ್ಷೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು, ಸಿಬ್ಬಂದಿ ಮತ್ತು ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರೊಬ್ಬರೂ ಪರೀಕ್ಷಾ ಕೇಂದ್ರದಲ್ಲಿರದಂತೆ ನೋಡಿಕೊಳ್ಳಬೇಕು. ಪೊಲೀಸ್ ಸಿಬ್ಬಂದಿ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಿ, ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಡಿಡಿಪಿಐ ಎಚ್.ಸಿ. ಚಂದ್ರಶೇಖರ, ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ, ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷರು, ಉಪ ಮುಖ್ಯ ಅಧೀಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದ್ದರು.