ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ಎಚ್ಚೆತ್ತು ಕೊಂಡಿರುವ ರಾಜ್ಯ ಬಿಜೆಪಿ ನಾಯಕರು ಈಗ ಈ ಭಾಗದಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಮೇ ೩ರಂದು ಮತ್ತೆ ಬೆಂಗಳೂರಿಗೆ ಅಮಿತ್ ಶಾ ಆಗಮಿಸಲಿದ್ದಾರೆ. ಖೇಲೋ ಇಂಡಿಯಾ ಕ್ರೀಡಾಕೂಟದ ಸಮಾರೋಪದಲ್ಲಿ ಭಾಗಿಯಾದ ಬಳಿಕ ಪಕ್ಷದ ಕಚೇರಿಯಲ್ಲಿ ಒಂದೂವರೆ ಗಂಟೆ ಕಾಲ ಪಕ್ಷದ ಮುಖಂಡರ ಜತೆಗೆ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಹಳೆ ಮೈಸೂರು ಭಾಗದ ಸಮಾವೇಶದ ಬಗ್ಗೆ ಬಿಜೆಪಿ ನಾಯಕರು ಅಮಿತ್ ಶಾಗೆ ವರದಿ ನೀಡುವ ಸಾಧ್ಯತೆ ಇದೆ.
ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ ಎಂದು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಿಂದಲೂ ಅಮಿತ್ ಶಾ ರಾಜ್ಯ ನಾಯಕರಿಗೆ ನಿರ್ದೇಶನ ನೀಡುತ್ತಲೇ ಇದ್ದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ವರಿಷ್ಠರು ಕೆಂಗಣ್ಣು ಬೀರಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೊದಲ ಹಂತದಲ್ಲಿ ಬೃಹತ್ ಸಭೆ ನಡೆಸಲು ಬಿಜೆಪಿ ನಿರ್ಧರಿಸಿದೆ.
ಇದನ್ನೂ ಓದಿ:ಕೋರ್ಟ್ ಗಳಲ್ಲಿ ಸ್ಥಳೀಯ ಭಾಷೆಗಳನ್ನು ಹೆಚ್ಚು ಪ್ರೋತ್ಸಾಹಿಸಬೇಕು: ಪ್ರಧಾನಿ ನರೇಂದ್ರ ಮೋದಿ
ಸಂಸದೆ ಸುಮಲತಾ ಸೇರಿದಂತೆ ಮಂಡ್ಯ ಭಾಗದ ಕೆಲ ಜನಪ್ರಿಯ ನಾಯಕರು ಹಾಗೂ ಅವರ ಪುತ್ರರು ಬಿಜೆಪಿ ಸೇರ್ಪಡೆ ನಿಶ್ಚಿತ ಎಂದು ಹೇಳಲಾಗುತ್ತಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಈ ಕಾರ್ಯಾಚರಣೆ ನೇತೃತ್ವ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.