ಕೋವಿಡ್ ಅಟ್ಟಹಾಸದಿಂದಾಗಿ ಅರ್ಧಕ್ಕೆ ಮೊಟಕುಗೊಂಡಿದ್ದ ಕನ್ನಡದ ಬಿಗ್ ಬಾಸ್ 8ನೇ ಸೀಸನ್ ಇದೀಗ ಪುನಾರಂಭಗೊಳ್ಳುತ್ತಿದೆ.
ಈ ಬಗ್ಗೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿದ್ದಾರೆ.
“ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.
ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು.. ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.
ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ ಎಂದು ಪರಮೇಶ್ವರ್ ಗುಂಡ್ಕಲ್ ಬರೆದುಕೊಂಡಿದ್ದಾರೆ.
ಮನೆಯಲ್ಲಿ ಯಾರು ಇರಲಿದ್ದಾರೆ ?
ಸ್ಪರ್ಧಿಗಳಾದ ಕೆ.ಪಿ. ಅರವಿಂದ್, ಶಮಂತ್ ಗೌಡ, ಮಂಜು ಪಾವಗಡ, ದಿವ್ಯಾ ಸುರೇಶ್, ರಘು ಗೌಡ, ವೈಷ್ಣವಿ ಗೌಡ, ಶುಭಾ ಪೂಂಜಾ, ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಮತ್ತೆ ದೊಡ್ಮನೆಯ ಕದ ತಟ್ಟಿದ್ದಾರೆ ಎನ್ನಲಾಗಿದೆ.
ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತಗೊಳ್ಳುವ ವೇಳೆಯಲ್ಲಿ ಆಸ್ಪತ್ರೆ ಸೇರಿದ್ದ ದಿವ್ಯಾ ಉರುಡುಗ ಕೂಡ ಈ ತಂಡವನ್ನ ಸೇರಿದ್ದಾರೆ ಎಂಬ ಮಾಹಿತಿ ಕೂಡ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಈಗಾಗಲೇ ಕಲರ್ಸ್ ಕನ್ನಡ ವಾಹಿನಿ ಸಾಕಷ್ಟು ಪ್ರೋಮೋಗಳ ಮೂಲಕ 12 ಮಂದಿ ಸ್ಪರ್ಧಿಗಳು ಮನೆಗೆ ಹೊಕ್ಕಿರುವ ಬಗ್ಗೆ ಮಾಹಿತಿ ನೀಡಿದೆ. ಹೀಗಾಗಿ ಇನ್ನೊಂದು ವೈಲ್ಡ್ ಕಾರ್ಡ್ ಎಂಟ್ರಿ ಇದೆಯಾ ಎಂಬ ಪ್ರಶ್ನೆಯೂ ಅಭಿಮಾನಿಗಳನ್ನ ಕಾಡುತ್ತಿದೆ. ಶೋ ಆರಂಭದ ದಿನಾಂಕ ಹಾಗೂ ಎಷ್ಟು ದಿನಗಳವರೆಗೆ ಈ ಶೋ ನಡೆಯಲಿದೆ ಅನ್ನೋದಕ್ಕೆ ವಾಹಿನಿ ಕಡೆಯಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ.