ಮಂಗಳೂರು: ಹಕ್ಕಿ ಜ್ವರದ ಬಗ್ಗೆ ಆತಂಕ ಬೇಡ, ಇದರ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು. ಗುರುವಾರ ಡಿಸಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ ಹಕ್ಕಿ ಜ್ವರ (ಕೋಳಿಶೀತ ಜ್ವರ) ನಿಯಂತ್ರಿಸಲು ಪ್ರಾಣಿಜನ್ಯ ರೋಗತುರ್ತು ನಿರ್ವಹಣಾ ಸಮಿತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ಪ್ರದೇಶಗಳಲ್ಲಿ ನಿಗಾ ವಹಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ಕುರಿತು ಜನರಲ್ಲಿ ಅರಿವು ಮೂಡಿಸ ಬೇಕು. ಹ್ಯಾಂಡ್ ಸ್ಪ್ರೆ, ಮುಖ ಗವಸು ಮುಂತಾದ ಅಗತ್ಯ ವಸ್ತುಗಳನ್ನು ಜಿಲ್ಲಾ ವಿಪತ್ತು ವಿಭಾಗದಿಂದ ವಿತರಿಸ ಲಾಗುತ್ತದೆ ಎಂದು ಹೇಳಿದರು.
ಜಿಲ್ಲೆಯ ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ| ಜಯರಾಜ್ ಮಾತನಾಡಿ, ಜಿಲ್ಲೆಯಲ್ಲಿ 5 ಚೆಕ್‌ಪೋಸ್ಟ್‌ಗಳಲ್ಲಿ ಹೊರರಾಜ್ಯದಿಂದ ಬರುವ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ ಇಲಾಖೆ ವತಿಯಿಂದ ಎಲ್ಲ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ವಹಿಸಲಾಗುತ್ತಿದೆ. ಎಲ್ಲ ತಾಲೂಕುಗಳಿಂದ ರಕ್ತದ ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗ ಶಾಲೆಗೆ ನೀಡುತ್ತಿದ್ದೇವೆ. ಇದುವರೆಗೆ ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿರು ವುದಿಲ್ಲ ಎಂದರು.
ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ರಾಜೇಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ| ನವೀನ್‌ಚಂದ್ರ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.