Advertisement
ದೇಶಾದ್ಯಂತ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಸಿದ್ಧತೆ ನಡೆಸಿದ್ದು, ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರು ಬುಧವಾರ ಎಲ್ಲ ರಾಜ್ಯಗಳ ಪ್ರಮುಖ ನಾಯಕರು ಹಾಗೂ ಸದಸ್ಯತ್ವ ಅಭಿಯಾನ ರಾಜ್ಯ ಉಸ್ತುವಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಚರ್ಚೆ ನಡೆಸಿದರು. ಅದರಂತೆ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಆಯ್ದ ಪದಾಧಿಕಾರಿಗೊಂದಿಗೆ ಮಾತುಕತೆ ನಡೆಸಿದರು.
Related Articles
Advertisement
ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಘಟಕವು ಈ ಬಾರಿಯ ಸದಸ್ಯತ್ವ ಅಭಿಯಾನಕ್ಕೆ ವಿಶೇಷ ಯೋಜನೆ ರೂಪಿಸಿದೆ. ಬಿಜೆಪಿಯ ಐಟಿ ಘಟಕದ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಅವರು ಸದಸ್ಯತ್ವ ನೋಂದಣಿಗೆ ರೂಪಿಸಿರುವ ಯೋಜನೆಗಳ ಬಗ್ಗೆ ವಿವರ ನೀಡಿದರು.
ರಾಜ್ಯದಲ್ಲಿ 50 ಲಕ್ಷ ಸದಸ್ಯತ್ವ ಗುರಿ: ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕಳೆದ ಬಾರಿ ರಾಜ್ಯದಲ್ಲಿ 80 ಲಕ್ಷ ಸದಸ್ಯತ್ವ ನೋಂದಣಿಯಾಗಿತ್ತು. ಈ ಬಾರಿ ಇನ್ನೂ 50 ಲಕ್ಷ ಸದಸ್ಯತ್ವವನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡಲಾಗುವುದು. ರಾಜ್ಯದಲ್ಲಿ ಪಕ್ಷದ ಮಾಹಿತಿ ತಂತ್ರಜ್ಞಾನ ಘಟಕವು ಸಕ್ರಿಯವಾಗಿದ್ದು, ಈ ಗುರಿ ತಲುಪುವ ವಿಶ್ವಾಸವಿದೆ ಎಂದು ಹೇಳಿದರು.
ವಿಡಿಯೋ ಸಂವಾದದಲ್ಲಿ ರಾಜ್ಯ ಬಿಜೆಪಿ ಸದಸ್ಯತ್ವ ಅಭಿಯಾನ ಉಸ್ತುವಾರಿ ಎನ್.ರವಿಕುಮಾರ್, ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವ ವಿ.ಸೋಮಣ್ಣ, ಮಾಜಿ ಶಾಸಕ ಎಸ್.ಮುನಿರಾಜು, ಮುಖಂಡ ಚಲವಾದಿ ನಾರಾಯಣಸ್ವಾಮಿ ಇತರರು ಸಂವಾದದಲ್ಲಿ ಪಾಲ್ಗೊಂಡಿದ್ದರು.
ಪಕ್ಷ ತಲುಪುದವರನ್ನು ತಲುಪಿ: ಸದಸ್ಯತ್ವ ಅಭಿಯಾನಕ್ಕೆ ಸಿದ್ಧತೆ ನಡೆಯಬೇಕಿರುವ ಹಿನ್ನೆಲೆಯಲ್ಲಿ ಏಕ ಕಾಲಕ್ಕೆ ಎಲ್ಲ ರಾಜ್ಯಗಳ ಬಿಜೆಪಿ ಅಧ್ಯಕ್ಷರು, ಆಯ್ದ ಪದಾಧಿಕಾರಿಗಳೊಂದಿಗೆ ರಾಷ್ಟ್ರೀಯ ನಾಯಕರು ಸಂವಾದ ನಡೆಸಿದರು. ರಾಷ್ಟ್ರವ್ಯಾಪಿ ನಡೆಯಲಿರುವ ಸದಸ್ಯತ್ವ ಅಭಿಯಾನದಲ್ಲಿ ಪಕ್ಷ ತಲುಪದವರನ್ನು ತಲುಪಿ ಸದಸ್ಯರನ್ನಾಗಿ ಸೇರ್ಪಡೆ ಮಾಡಿಕೊಳ್ಳಲು ಆದ್ಯತೆ ನೀಡಬೇಕು.
ಸಂಘಟನೆ ದುರ್ಬಲವಾಗಿರುವ ಕಡೆ ವಿಶೇಷ ಆದ್ಯತೆ ನೀಡಿ ಸದಸ್ಯತ್ವ ನೋಂದಣಿ ಹೆಚ್ಚು ಮಾಡಬೇಕು ಜು. 6ರಂದು ಸದಸ್ಯತ್ವ ಅಭಿಯಾನಕ್ಕೆ ಅದ್ಧೂರಿ ಚಾಲನೆ ನೀಡಲು ಸಿದ್ಧತೆ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಪದಾಧಿಕಾರಿಯೊಬ್ಬರು ತಿಳಿಸಿದರು.