ಲಕ್ನೋ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಯಾವುದೇ ಆಹ್ವಾನವನ್ನು ಸ್ವೀಕರಿಸಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಗುರುವಾರ (ಡಿ29) ಹೇಳಿದ್ದಾರೆ.
ಅಖಿಲೇಶ್ ಯಾದವ್, ಬಿಎಸ್‌ಪಿ ವರಿಷ್ಠೆ ಮಾಯಾವತಿ ಮತ್ತು ಆರ್‌ಎಲ್‌ಡಿಯ ಜಯಂತ್ ಚೌಧರಿ ಸೇರಿದಂತೆ ಬಿಜೆಪಿಯೇತರ ಪಕ್ಷಗಳ ಹಲವು ನಾಯಕರನ್ನು ಜನವರಿ 3 ರಿಂದ ಉತ್ತರ ಪ್ರದೇಶದಲ್ಲಿ ನಡೆಯುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ ಎಂದು ಕಾಂಗ್ರೆಸ್ ಇತ್ತೀಚೆಗೆ ಹೇಳಿತ್ತು.
“ನಮಗೆ ಯಾವುದೇ ಆಹ್ವಾನ ಬಂದಿಲ್ಲ. ನಮ್ಮ ಪಕ್ಷದ ಸಿದ್ಧಾಂತ ವಿಭಿನ್ನವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಒಂದೇ” ಎಂದು ಅಖಿಲೇಶ್ ಉತ್ತರ ಪ್ರದೇಶದ ಲಕ್ನೋದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗೆ ಮೀಸಲಾತಿ ಕುರಿತು ಮಾತನಾಡಿದ ಅಖಿಲೇಶ್, ಬಿಜೆಪಿ ಒಬಿಸಿ ವಿರೋಧಿ, ದಲಿತ ವಿರೋಧಿ. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಈ ವಿಷಯವನ್ನು ಚರ್ಚಿಸಲು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದರು.
‘ಸರ್ಕಾರದ ಆತ್ಮಸಾಕ್ಷಿಯು ಸ್ಪಷ್ಟವಾಗಿದ್ದರೆ, ಅದು ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಬೇಕು, ಇದರಿಂದ ಅವರು ತಮ್ಮ ಅಭಿಪ್ರಾಯವನ್ನು ಮಂಡಿಸಬಹುದು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ಕುರಿತು ನಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ನಮಗೆ ಅವಕಾಶ ನೀಡಬೇಕು’ ಎಂದರು.
ಅಗತ್ಯವಿದ್ದರೆ, ಪಕ್ಷದ ಒಬಿಸಿ ವಿಭಾಗವು ಇತರ ಹಿಂದುಳಿದ ವರ್ಗಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸುತ್ತದೆ ಎಂದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ಕುರಿತು ಉತ್ತರ ಪ್ರದೇಶ ಸರ್ಕಾರ ಬುಧವಾರ ಐದು ಸದಸ್ಯರ ಆಯೋಗವನ್ನು ನೇಮಿಸಿದೆ.