ನವದೆಹಲಿ: ಕೇಂದ್ರ ಸರ್ಕಾರದಿಂದ ದೇಶದ 2.7 ಲಕ್ಷ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ “ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ” ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಯಾತ್ರೆಯ ಮೂಲಕ ಪ್ರಧಾನ ಮಂತ್ರಿ ಅವಾಸ್ ಯೋಜನೆ (ಗ್ರಾಮೀಣ), ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಯೋಜನೆ, ಫಸಲ್ ಬೀಮಾ ಯೋಜನೆ, ಪೋಷಣ್ ಅಭಿಯಾನ, ಉಜ್ವಲ್ ಯೋಜನೆ, ಆಯುಷ್ಮಾನ್ ಭಾರತ್, ಜನೌಷಧಿ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ತಿಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳು ಗರಿಷ್ಠ ಸಂಖ್ಯೆಯಲ್ಲಿ ಫಲುನುಭವಿಗಳನ್ನು ತಲುಪುವ ನಿಟ್ಟಿನಲ್ಲಿ ಆರು ತಿಂಗಳ ಗುರಿಯನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಸಚಿವರಿಗೆ ನೀಡಿದ್ದಾರೆ.
ಮುಂದಿನ ತಿಂಗಳ ದೀಪಾವಳಿ ನಂತರ “ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ” ಆರಂಭವಾಗಲಿದೆ. ಫಲನುಭವಿಗಳನ್ನು ತಲುಪುವ ನಿಟ್ಟಿನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ “ರಥ’ಗಳು ದೇಶಾದ್ಯಂತ ಸಂಚರಿಸಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಇನ್ನು ಹೆಚ್ಚಿನ ಶ್ರಮ ವಹಿಸುವಂತೆ ಹಾಗೂ ಅರ್ಹ ಫಲನುಭವಿಗಳಿಗೆ ಕಲ್ಯಾಣ ಯೋಜನೆಯ ಸೌಲಭ್ಯಗಳು ತ್ವರಿತವಾಗಿ ತಲುಪುವಂತೆ ನೋಡಿಕೊಳ್ಳುವಂತೆ ತಮ್ಮ ಸಹೋದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದರು ಎಂದಿದ್ದಾರೆ.