Advertisement

ಅಪಪ್ರಚಾರ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ

10:45 AM May 06, 2022 | Team Udayavani |

ಹುಬ್ಬಳ್ಳಿ: ವಿವಿಧ ಸುಳ್ಳುಗಳನ್ನು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್‌ ಹುನ್ನಾರ ಖಂಡಿಸಿ ಹಾಗೂ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಅಭಿಯಾನ ಹಮ್ಮಿಕೊಳ್ಳುವ ಕುರಿತು ಮೇ 10ರಂದು ಉಡುಪಿಯಲ್ಲಿ ನಡೆಯುವ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ರೂಪರೇಷೆ ಸಿದ್ಧಪಡಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ತಿಳಿಸಿದರು.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಫಲಿತಾಂಶ ನಂತರದಲ್ಲಿ ಕಾಂಗ್ರೆಸ್‌ ನಾಯಕರು ನಿದ್ರಾಹೀನರಾಗಿದ್ದಾರೆ. ಸುಳ್ಳಿನ ಸರ ಮಾಲೆಗಳೊಂದಿಗೆ ಆರೋಪ ಮಾಡುವ, ಗಲಭೆ ಸೃಷ್ಟಿಸುವ, ಅಲ್ಪಸಂಖ್ಯಾತರ ತು ತುಷ್ಠಿಕರಣ ಶುರುವಿಟ್ಟು ಕೊಂಡಿದ್ದಾರೆ. ವಿಶೇಷವಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ನಿರಾಧಾರ ಆರೋಪಗಳಿಗೆ ಮುಂದಾಗಿದ್ದು, ಹಿಟ್‌ ಆ್ಯಂಡ್‌ ರನ್‌ ರೀತಿ ಯಾವುದೇ ದಾಖಲೆಗಳಿಲ್ಲದೆ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

2013ರಲ್ಲಿ ಕೆಪಿಎಸ್‌ಸಿ ಹಗರಣ, 2015ರಲ್ಲಿ ಪಿಎಸ್‌ಐ ನೇಮಕ ಹಗರಣ, ಲೋಕಾಯುಕ್ತವನ್ನು ಬಲಹೀನಗೊಳಿಸಿ ಎಸಿಬಿ ಜಾರಿಗೊಳಿಸಿದ್ದು, ಅರ್ಕಾವತಿ ಬಡಾವಣೆಯ ಐದು ಸಾವಿರ ಕೋಟಿ ರೂ. ಹಗರಣ ಹೀಗೆ ಅನೇಕ ಹಗರಣಗಳ ಆಡಳಿತ ನಡೆಸಿದ ಸಿದ್ಧರಾಮಯ್ಯ ಅವರು, ಇದೀಗ ಬಿಜೆಪಿ ವಿರುದ್ಧ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಏಕವಚನದಲ್ಲಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ಏನೆಂಬುದು ದೇಶಕ್ಕೆ ಗೊತ್ತಿದೆ. ಕಾಂಗ್ರೆಸ್‌ ನವರಿಂದ ನೀತಿ-ನೈತಿಕತೆ ಪಾಠ ಕಲಿಯುವ ದುಸ್ಥಿತಿ ಬಿಜೆಪಿಗಿನ್ನು ಬಂದಿಲ್ಲ ಎಂದರು.

ಪಿಎಸ್‌ಐ ನೇಮಕ, ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಸಮರ್ಪಕವಾಗಿ ತನಿಖೆ ನಡೆಸುತ್ತಿದೆ. ಪಿಎಸ್‌ಐ ನೇಮಕ ಪ್ರಕರಣ ದಲ್ಲಿ ಮಾಧ್ಯಮಗಳ ಮುಂದೆ ಆರೋಪ ಮಾಡುವ ಮಾಜಿ ಸಚಿವ ಪ್ರಿಯಾಂಕ ಖರ್ಗೆಗೆ ತಮ್ಮಲ್ಲಿರುವ ದಾಖಲೆಗಳನ್ನು ನೀಡುವಂತೆ ಸಿಐಡಿ ನೋಟಿಸ್‌ಗಳನ್ನು ನೀಡಿದರೂ ಇದುವರೆಗೂ ಅವರು ಹಾಜರಾಗಿಲ್ಲ. ಕೇವಲ ಆರೋಪಗಳನ್ನು ಮಾತ್ರ ಮಾಡುತ್ತಿದ್ದಾರೆ. ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕೆ.ಎಸ್‌.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ವಿಶ್ವವೇ ಮೋದಿ ಕಡೆ ನೋಡುತ್ತಿದೆ. ಇನ್ನು ರಾಜ್ಯದಲ್ಲಿ ಬಿಜೆಪಿ ಸರಕಾರ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತಿದೆ. ಮೈಸೂರಿನಲ್ಲಿ ಸುಮಾರು 22,500 ಕೋಟಿ ರೂ.ಬಂಡವಾಳ ಹೂಡಿಕೆಯ ಸೆಮಿಕಂಡಕ್ಟರ್‌ ಉದ್ಯಮ ಆರಂಭ ಮಹತ್ವದ ಯತ್ನ, ನವೆಂಬರ್‌ನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲು ತಯಾರಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಇದನ್ನು ಜನರಿಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಅಭಿಯಾನ ಹಮ್ಮಿಕೊಳ್ಳಲಾಗುವುದು. ಈ ಬಗ್ಗೆ ಮೇ 10ರಂದು ಉಡುಪಿಯಲ್ಲಿ ನಡೆಯುವ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Advertisement

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರ ಹಿಡಿಯಲಿದೆ. ಹಿರಿಯರಾದ ಬಸವರಾಜ ಹೊರಟ್ಟಿ ಅವರು ಪಕ್ಷ ಸೇರ್ಪಡೆಗೆ ಮುಂದಾಗಿದ್ದು, ಅವರಿಗೆ ಟಿಕೆಟ್‌ ನೀಡುವ ಕುರಿತಾಗಿ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದರು.

ವಿಧಾನಪರಿಷತ್ತು ಸದಸ್ಯ ಪ್ರದೀಪ ಶೆಟ್ಟರ, ಮುಖಂಡರಾದ ಲಿಂಗರಾಜ ಪಾಟೀಲ, ಸಂಜಯ ಕಪಟಕರ, ನಾಗೇಶ ಕಲಬುರ್ಗಿ, ಸಂತೋಷ ಚವ್ಹಾಣ, ತಿಪ್ಪಣ್ಣ ಮಜ್ಜಗಿ, ದತ್ತ ಮೂರ್ತಿ ಕುಲಕರ್ಣಿ, ರವಿ ನಾಯಕ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next