ಬೆಂಗಳೂರು: ಉತ್ತರಪ್ರದೇಶ ಮತ್ತು ಉತ್ತರಖಂಡ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಪ್ರಮಾಣದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಎದುರು ಸಂಭ್ರಮಾಚಾರಣೆ ಮಾಡಲಾಯಿತು.
ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಿಸಿ ಸಿಹಿ ಹಂಚಿದರು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪರ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಯಶಸ್ಸಿನ ಕೀರ್ತಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಸಲ್ಲಬೇಕು. ರಾಜ್ಯದ ಪ್ರತಿಯೊಬ್ಬ ಕಾರ್ಯಕರ್ತನ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಕಿಡಿ ಕಾರಿದ ಯಡಿಯೂರಪ್ಪ, ಉತ್ತರಪ್ರದೇಶದಲ್ಲಿ ಎಸ್ಪಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಂದ ಸ್ಥಿತಿಯೇ 2018ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ಗೆ ಬರಲಿದೆ. ಮೋದಿ ಮತ್ತು ಶಾ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಚುನಾವಣೆ ಎದುರಿಸಲಿದ್ದು, ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದರು. ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಮತ್ತಿತರರು ಇದ್ದರು.
ಕೆಆರ್‌ಪುರದಲ್ಲಿ ಬಿಜೆಪಿ ಬೈಕ್ ರ್ಯಾಲಿ
ಕೆ.ಆರ್.ಪುರ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಕೆ.ಆರ್.ಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಕ್ಷೇತ್ರದ್ಯಾಂತ ಬೈಕ್ ರ್ಯಾಲಿ ಹಮ್ಮಿಕೊ ಳ್ಳಲಾಗಿತ್ತು. ರ್ಯಾಲಿಯಲ್ಲಿ ಮಾಜಿ ಶಾಸಕ ನಂದೀಶ್ ರೆಡ್ಡಿ ಭಾಗವಹಿಸಿದ್ದರು.
ಕೆಆರ್‌ಪುರದ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ನಡೆಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದರು. ಮಾಜಿ ಪಾಲಿಕೆ ಸದಸ್ಯರಾದ ಗೀತಾ ವಿವೇಕಾನಂದಬಾಬು. ಕಲ್ಕೆರೆ ಶ್ರೀನಿವಾಸ್, ಮುಖಂಡರಾದ ಸುಂದರ್, ಕಿರಣ್‌ರೆಡ್ಡಿ, ಮುನಿರಾಜ್, ಹೊರಮಾವು ಆರ್ ಪ್ರಕಾಶ್ ಮತ್ತಿತರರು ಹಾಜರಿದ್ದರು.