Advertisement

BJP: ಕಾರ್ಯಕರ್ತನ ಆತ್ಮಹತ್ಯೆಗೆ ಬಿಜೆಪಿ ಕೆಂಡ

11:49 PM Oct 19, 2023 | Team Udayavani |

ಬೆಂಗಳೂರು: ಪಕ್ಷದ ಕಾರ್ಯಕರ್ತ ಶಿವಕುಮಾರ್‌ ಆತ್ಮಹತ್ಯೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್‌ ಪಾಟೀಲ್‌ ಕಾರಣ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ಈ ಸಾವಿನ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Advertisement

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಶಿರೋಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಶಿವಕುಮಾರ್‌ (35) ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್‌ ಅಷ್ಟೇ ಅಲ್ಲದೆ, 3 ಆಡಿಯೋ ರೆಕಾರ್ಡ್‌ಗಳೂ ಪತ್ತೆಯಾಗಿವೆ. ನಾನು ಹಿಂದೂ ಹುಲಿ, ಹಿಂದೂವಾಗಿಯೇ ಸಾಯುತ್ತೇನೆ. ಸಚಿವ ಶರಣಪ್ರಕಾಶ್‌ ಪಾಟೀಲ್‌ ಹಿಂದೂ ಧರ್ಮದ ಬಗ್ಗೆ ಮಾತನಾಡಬಾರದು. ಹಾಗೆ ಮಾತನಾಡಿದರೆ ಅವರಿಗೆ ಬೆಂಕಿ ಬೀಳುತ್ತದೆ. ನನ್ನ ಸಾವಿಗೆ ಶರಣಪ್ರಕಾಶ್‌ ಪಾಟೀಲ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಕಿರುಕುಳವೇ ಕಾರಣ ಎಂದು ಅದರಲ್ಲಿ ಉಲ್ಲೇಖವಾಗಿದೆ.

ಇದಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಶರಣಪ್ರಕಾಶ್‌ ಪಾಟೀಲ್‌, ಆ ವ್ಯಕ್ತಿ ಯಾರೆಂದು ನನಗೆ ಗೊತ್ತಿಲ್ಲ. ಇದೇ ಮೊದಲ ಬಾರಿಗೆ ನೋಡಿರುವುದು. ಆತ್ಮಹತ್ಯೆ ಮಾಡಿಕೊಂಡಾತ ನನ್ನ ಹೆಸರು ಯಾಕೆ ಹೇಳಿದ್ದಾನೆ ಎಂಬುದೂ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದಷ್ಟೇ ಹೇಳಿದ್ದಾರೆ.

ಇದಕ್ಕೆ ಬಿಜೆಪಿ ನಾಯಕರಿಂದ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡು ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಲೇಬೇಕು. ಇಲ್ಲದಿದ್ದರೆ, ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದೆ.

ರೈತ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ಖೂಬಾ
ಕಲಬುರಗಿ: ಜಿಲ್ಲೆಯ ಸೇಡಂ ಮತಕ್ಷೇತ್ರದ ಚಿಂಚೋಳಿ ತಾಲೂಕಿನ ಶಿರೊಳ್ಳಿ ಗ್ರಾಮದ ರೈತ ಹಾಗೂ ಬಿಜೆಪಿ ಕಾರ್ಯಕರ್ತ ಶಿವಕುಮಾರ್‌ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಧವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಕೆಲವು ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರು ಮನಬಂದಂತೆ ಥಳಿಸಿದ್ದರಿಂದ ನೊಂದು ಶಿವಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಆತ್ಮಹತ್ಯೆಗೆ ಸಚಿವ ಡಾ| ಶರಣಪ್ರಕಾಶ ಪಾಟೀಲ್‌ ಅವರೇ ಕಾರಣವೆಂಬ ಆಡಿಯೋ ಸಂದೇಶ ಮಾಡಿ ಹರಿಯಬಿಟ್ಟು ಶಿವಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಆಡಿಯೋವನ್ನೇ ಸಾಕ್ಷಿಯಾಗಿಟ್ಟುಕೊಂಡು ಸರಕಾರ ಕೂಡಲೇ ಆರೋಪಿಗಳನ್ನು ಬಂಧಿ ಸಬೇಕು ಎಂದು ಆಗ್ರಹಿಸಿದರು.

ಈ ಸಾವಿಗೆ ನೈತಿಕ ಹೊಣೆ ಹೊತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್‌ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಮೃತ ಕುಟುಂಬದ ಮನೆಗೆ ಭೇಟಿ ನೀಡಿ, ಸರಕಾರದಿಂದ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಧ್ವನಿಯೆತ್ತುವ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ: ಸಂಸದ ಜಾಧವ್‌ ಆರೋಪ
ರಾಜ್ಯದಲ್ಲಿ ಕಾಂಗ್ರೆಸ್‌ ಅ ಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಧ್ವನಿ ಎತ್ತಿದರೆ ಸಾಕು ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಳ್ಳುವುದು, ಧರ್ಮಕ್ಕಾಗಿ ಹೋರಾಟ ಮಾಡುವವರನ್ನು ಹತ್ತಿಕ್ಕುವುದು ಮತ್ತು ಅಧರ್ಮದ ಚಟುವಟಿಕೆ ಕೈಗೊಂಡವರನ್ನು ಪ್ರೋತ್ಸಾಹಿಸುವ ಕೆಲಸ ನಡೆಯುತ್ತಿದೆ. ಧ್ವನಿ ಎತ್ತಿದ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂದು ಸಂಸದ ಡಾ| ಉಮೇಶ ಜಾಧವ್‌ ಆರೋಪಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಮಂಗಳವಾರ ಶಿವಕುಮಾರ್‌ ಅವರ ಸಂಬಂಧಿ ನರಸಪ್ಪ ಪೂಜಾರಿ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿ ಆಸ್ಪತ್ರೆಗೆ ಸೇರುವಂತೆ ಮಾಡಿದ್ದಾರೆ. ಬುಧವಾರ ಶಿವಕುಮಾರ್‌ ಮೇಲೆ ಹಲ್ಲೆ ಮಾಡಿದ್ದರಿಂದ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.

ರಾಜ್ಯ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಚಿವರ ಹೆಸರು ಬಂದಿದೆ. ಡೆತ್‌ ನೋಟ್‌ ಇದೆ. ಪ್ರಾಮಾಣಿಕ ತನಿಖೆ ಮಾಡಿಸಬೇಕು. ತಪ್ಪಿಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಅಮಾಯಕ ವ್ಯಕ್ತಿಯ ಕುಟುಂಬಕ್ಕೆ ನ್ಯಾಯ ಸಿಗಬೇಕು.
-ಡಾ| ಸಿ.ಎನ್‌. ಅಶ್ವತ್ಥನಾರಾಯಣ, ಮಾಜಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next