Advertisement
ಏನಿರಬಹುದು ಶಾ ಸಲಹೆ?:
Related Articles
Advertisement
ಬಿಜೆಪಿ ಮೂಲಗಳ ಪ್ರಕಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೂ ಮುನ್ನವೇ ರಾಜ್ಯ ಸಚಿವ ಸಂಪುಟದ ಪುನಾರಚನೆಯಾಗುವ ಸಾಧ್ಯತೆ ಇದ್ದು, ಖಾಲಿ ಇರುವ ನಾಲ್ಕು ಸ್ಥಾನಗಳ ಜತೆಗೆ ಕನಿಷ್ಠ ಐದರಿಂದ ಆರು ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಅಮಿತ್ ಶಾ ಸಭೆಯ ಅನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಅಧಿಕಾರ ಅನುಭವಿಸಿರುವ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಪಟ್ಟಿ ಸಿದ್ದವಾಗಿದ್ದರೂ ಮಾಜಿ ಸಿಎಂ ಯಡಿಯೂರಪ್ಪ ಅವರ ಒತ್ತಡದಿಂದ ಬದಲಾವಣೆ ವಿಳಂಬವಾಗಿರುವ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ಚುನಾವಣಾ ಸಿದ್ಧತೆ :
2023ರ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿ ನಾಯಕರ ರಾಜ್ಯ ಪ್ರವಾಸದಲ್ಲಿ ಪಕ್ಷದ ಸಂಘಟನೆ, ಸರಕಾರಗಳ ಸಾಧನೆಗಳನ್ನು ಜನರಿಗೆ ತಲುಪಿಸುವ ಕುರಿತು ಅಮಿತ್ ಶಾ ಕೆಲವು ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.
ರಾಹುಲ್ ಚುನಾವಣೆ ಸಿದ್ಧತೆ :
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ರಾಜ್ಯಕ್ಕೆ ಆಗಮಿಸಿದ್ದು, ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ನಮಿಸಿದರು. ಅನಂತರ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅಪ್ಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ವಿಧಾನಸಭೆ ಚುನಾವಣೆ ಸಿದ್ಧತೆ, ಸಂಘಟನೆ ಕುರಿತು ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ನಾಯಕರ ಸಿದ್ಧತೆಗಳ ವಿವರ ಪಡೆಯಲಿದ್ದಾರೆ. ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಕೆಲವು ನಿರ್ದೇಶನ ನೀಡುವ ಸಾಧ್ಯತೆಯಿದೆ.
ರಾಹುಲ್ ಗಾಂಧಿಯವರು ಶುಕ್ರವಾರ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ. ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಮಾಜಿ ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅನಂತರ ಯುವ, ವಿದ್ಯಾರ್ಥಿ ಹಾಗೂ ಮಹಿಳಾ ಘಟಕಗಳ ಜತೆ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಾಯಕರ ಸ್ವಾಗತ :
ಗುರುವಾರ ಬೆಂಗಳೂರು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಸಲೀಂ ಅಹಮದ್ ಮತ್ತಿತರ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು.
ನಮ್ಮದು ಹಳೆಯ ಒಡನಾಟ :
ಸಿದ್ಧಗಂಗಾ ಮಠಕ್ಕೆ ಬಂದದ್ದು ಸಂತೋಷವಾಗಿದೆ. ಮಠದ ಜತೆ ನಮ್ಮ ಒಡನಾಟ ತುಂಬಾ ಹಳೆಯದು. ಬಸವಣ್ಣ ಹೇಳಿದಂತೆ ನಾವೆಲ್ಲಾ ಕೂಡಿ ಬಾಳಬೇಕು. ಶಿವಕುಮಾರ ಶ್ರೀಗಳು ನಮಗೆಲ್ಲ ದಾರಿ ದೀಪ ಆಗಿದ್ದರು.– ರಾಹುಲ್ ಗಾಂಧಿ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ