ಬೆಂಗಳೂರು: ರಾಮನಗರ ಹಾಗೂ ಜಮಖಂಡಿ ಕ್ಷೇತ್ರ ಉಪಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಪಕ್ಷದ ರಾಜ್ಯಾಧ್ಯಕ್ಷರು ಜಿಲ್ಲಾಧ್ಯಕ್ಷರೊಂದಿಗೆ ಚರ್ಚಿಸಿ ಆಯ್ಕೆ ಮಾಡಲಿದ್ದಾರೆ.
ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ತುಸು ದುರ್ಬಲವಾಗಿದೆ. ಆದರೆ ಜಮಖಂಡಿ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾತನಾಡಿದ ಅವರು, ಕಾಂಗ್ರೆಸ್- ಜೆಡಿಎಸ್ ಉಪಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೂ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.ರಾಮನಗರದಲ್ಲಿ ಕಾಂಗ್ರೆಸ್‌ಗೆ ಸ್ಪರ್ಧಿಸುವ ಶಕ್ತಿ, ತಾಕತ್ತು ಎರಡೂ ಇಲ್ಲ. ಹಾಗಾಗಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ. ಜಮಖಂಡಿ ಕ್ಷೇತ್ರದಲ್ಲಿ ಕಳೆದ ಬಾರಿ ಬಂಡಾಯ ಅಭ್ಯರ್ಥಿ ಸ್ಪರ್ಧೆಯಿಂದಾಗಿ ಪಕ್ಷದ ಅಭ್ಯರ್ಥಿ ಕಡಿಮೆ ಅಂತರದಲ್ಲಿ ಸೋತಿದ್ದರು. ಈ ಬಾರಿ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಖಂಡಿತ ಗೆಲ್ಲಲಿದ್ದೇವೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಾತುಕತೆ ನಡೆದಿಲ್ಲ. ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಬಹುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಬೂತ್ ಮಟ್ಟದ ಸಮಿತಿ ರಚನೆ, ಸಂಘಟನೆ ಬಲವರ್ಧನೆ ಕಾರ್ಯ ಮುಂದುವರಿಸಿದ್ದೇವೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಹಿರಿಯ ನಾಯಕರಾಗಿದ್ದು ಅವರ ಅನುಭವ ಹಾಗೂ ಹಿರಿತನವನ್ನು ಪಕ್ಷ ಬಳಸಿಕೊಳ್ಳಲಿದೆ. ಅವರು ಬಿಜೆಪಿಯೊಂದಿಗೆ ಇರುತ್ತಾರೆ. ಅವರನ್ನು ಪಕ್ಷ ಗೌರವಯುವತಾಗಿ ನಡೆಸಿಕೊಂಡಿದೆ. ಕೃಷ್ಣ ಅವರ ರಾಜಕೀಯ ನಿವೃತ್ತಿ ಊಹಾಪೋಹ. ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ, ಅವರ ನಾಯಕತ್ವ ಒಪ್ಪಿ ಅವರು ಬಿಜೆಪಿ ಸೇರ್ಪಡೆಯಾದವರು. ಹೀಗಾಗಿ ಕೃಷ್ಣ ಅವರು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಅವರ ಪುತ್ರಿ ಶಾಂಭವಿ ಅವರಿಗೆ ಲೋಕಸಭಾ ಚುನಾವಣಾ ಟಿಕೆಟ್ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
ಚುನಾವಣೆಗೆ ಸಿದ್ಧತೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ನೇತೃತ್ವದಲ್ಲಿ ಎಲ್ಲ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಿತು. ಚುನಾವಣಾ ಸಿದ್ದತೆ ಸೇರಿದಂತೆ ಇತರೆ ಸಂಘಟನಾ ವಿಚಾರ ಕುರಿತಂತೆ ಚರ್ಚೆ ನಡೆಸಿದರು ಎನ್ನಲಾಗಿದೆ.