ಸುಳ್ಯ: ಸುಳ್ಯ ಬಿಜೆಪಿ ಮಂಡಲ ಸಮಿತಿ ನೂತನ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ಸುಳ್ಯದಲ್ಲಿ ನಡೆದ ಕೋರ್ ಕಮಿಟಿ ಸಭೆ ಯಾವುದೇ ನಿರ್ಧಾರಕ್ಕೆ ಬಾರದೇ ಮುಕ್ತಾಯಗೊಂಡಿದೆ.
ಸಭೆಯಲ್ಲಿ ಪಕ್ಷ ಸಂಘಟನೆ, ಮುಂದಿನ ಲೋಕಸಭೆ ಚುನಾವಣೆ ತಯಾರಿ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಸುಳ್ಯ ಮಂಡಲದಲ್ಲಿ ಯಾವುದೇ ಅಸಮಾಧಾನ, ಗೊಂದಲ ಇಲ್ಲ ಎಂದು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಮಂಗಳವಾರ ದಿನಪೂರ್ತಿ ಮ್ಯಾರಥಾನ್ ಸಭೆ ನಡೆದಿದೆ. ಕೋರ್‌ಕಮಿಟಿ ಸದಸ್ಯರು ಹಾಗೂ ಜಿಲ್ಲಾ ಮುಖಂಡರು ಮಧ್ಯೆ ತೀವ್ರ ಚರ್ಚೆ ನಡೆಯಿತು. ಕೋರ್ ಕಮಿಟಿ ಸದಸ್ಯರು ತಮ್ಮ ನಿಲುವನ್ನು ಬದಲಾ ಯಿ ಸದೆ ಪಟ್ಟು ಹಿಡಿದು ಚರ್ಚೆ ನಡೆಸಿದರು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದಲ್ಲಿ ಪ್ರಜಾಪ್ರಭುತ್ವ ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಬೇಕು. ಕೋರ್‌ಕಮಿಟಿ, ಮಂಡಲ ಸಮಿತಿ ಹಾಗೂ ಕಾರ್ಯಕರ್ತರ ತೀರ್ಮಾನಕ್ಕೆ ಬೆಲೆ ನೀಡಬೇಕು ಎಂದು ಸದಸ್ಯರು ಜಿಲ್ಲಾ ಪ್ರಮುಖರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಧ್ಯಾಹ್ನದ ಬಳಿಕ ನೂತನ ಅಧ್ಯಕ್ಷ ವೆಂಕಟ್ ವಳಲಂಬೆ ಸಭೆ ಯಲ್ಲಿ ಭಾಗವಹಿಸಿದ್ದರು. ಎಲ್ಲ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಒಟ್ಟಾಗಿ ಕೆಲಸ ಮಾಡಲಾಗುವುದು ಎಂದು ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದರು.
ಬಿಜೆಪಿ ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಕೋರ್‌ಕಮಿಟಿ ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್. ಮನ್ಮಥ, ಎ.ವಿ. ತೀರ್ಥರಾಮ, ವೆಂಕಟ್ ದಂಬೆಕೋಡಿ, ಸುಬೋಧ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಕೃಷ್ಣ ಶೆಟ್ಟಿ ಕಡಬ ಭಾಗವಹಿಸಿದ್ದರು.