Advertisement

ಇಂದು ಬಿಜೆಪಿ ಕೋರ್‌ ಕಮಿಟಿ ಸಭೆ: ಪರಿಷತ್‌, ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಕಸರತ್ತು

02:03 AM May 14, 2022 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿಯ ಮಹತ್ವದ ಕೋರ್‌ ಕಮಿಟಿ ಸಭೆ ಮೇ 14ರಂದು ನಡೆಯಲಿದ್ದು, ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ ಹಾಗೂ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಚರ್ಚಿಸಿ ಪಟ್ಟಿ ಸಿದ್ಧಪಡಿಸುವ ಸಾಧ್ಯತೆ ಇದೆ.

Advertisement

ಈಗಾಗಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ರಾಜ್ಯಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ ಸೇರಿದಂತೆ ಪ್ರಮುಖ ನಾಯಕರು ಕೋರ್‌ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಬಿಬಿಎಂಪಿ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗೆ ಸಿದ್ಧªತೆ ಮಾಡಿಕೊಳ್ಳುವ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸವದಿ, ಸಿಂಗ್‌ಗೆ ಕೊಕ್‌?
ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಖಾಲಿಯಾಗುವ ಏಳು ಸ್ಥಾನಗಳಲ್ಲಿ ಬಿಜೆಪಿ ಶಾಸಕರ ಸಂಖ್ಯಾ ಬಲದ ಆಧಾರದಲ್ಲಿ ನಾಲ್ಕು ಸ್ಥಾನಗಳು ಬಿಜೆಪಿಗೆ ದೊರೆಯಲಿದ್ದು, ಹಾಲಿ ವಿಧಾನ ಪರಿಷತ್‌ ಸದಸ್ಯರಾಗಿರುವ ಲಕ್ಷ್ಮಣ ಸವದಿ ಮತ್ತು ಲೆಹರ್‌ ಸಿಂಗ್‌ ಅವರಿಗೆ ಪುನರಾಯ್ಕೆ ಮಾಡಬೇಕೊ ಅಥವಾ ಬೇರೆಯವರಿಗೆ ನೀಡಬೇಕೊ ಎನ್ನುವ ಕುರಿತಂತೆಯೂ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಬಿಜೆಪಿ ಉನ್ನತ ಮೂಲಗಳ ಪ್ರಕಾರ ನಾಲ್ಕು ಸ್ಥಾನ ಒಬ್ಬರು ಮಹಿಳೆ, ಒಬ್ಬರು ಎಸ್ಸಿ, ಒಬ್ಬರು ಒಬಿಸಿ ಮತ್ತೂಂದು ಸಾಮಾನ್ಯ ವರ್ಗದವರಿಗೆ ನೀಡಬೇಕು ಎನ್ನುವ ಲೆಕ್ಕಾಚಾರ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

ಸಂಭಾವ್ಯ ಆಕಾಂಕ್ಷಿಗಳು
ಮಹಿಳೆಯರ ಕೋಟಾದಲ್ಲಿ ಕೇಂದ್ರದ ಮಾಜಿ ಸಚಿವ ದಿ| ಅನಂತಕುಮಾರ್‌ ಪತ್ನಿ ತೇಜಸ್ವಿನಿ ಅನಂತಕುಮಾರ್‌ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಎಸ್ಸಿ ಕೋಟಾದಡಿ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯ ಜಗದೀಶ ಹಿರೇಮನಿ, ಹುಬ್ಬಳ್ಳಿ ಮೂಲದ ಚಂದ್ರಶೇಖರ ಅವರ ಹೆಸರುಗಳು ಮುಂಚೂಣಿಯಲ್ಲಿವೆ ಎಂದು ತಿಳಿದುಬಂದಿದೆ.

ಲೆಹರ್‌ ಸಿಂಗ್‌ ಅವರಿಗೆ ನೀಡದಿದ್ದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನ ಅವರಿಗೆ ಟಿಕೆಟ್‌ ನೀಡುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ವಿಚಾರದಲ್ಲಿಯೂ ಇಂದಿನ ಕೋರ್‌ ಕಮಿಟಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದ್ದು, ಅವರು ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಒಲವು ತೋರಿಸಿದರೆ, ಒಂದು ವರ್ಷದ ಅವಧಿಗೆ ಅವರಿಗೆ ಟಿಕೆಟ್‌ ನೀಡಬೇಕಾ ಅಥವಾ ಮತ್ತೂಬ್ಬರಿಗೆ ಅವಕಾಶ ನೀಡಬೇಕಾ ಎನ್ನುವ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಇವರಲ್ಲದೇ ಹುಡಾ ಮಾಜಿ ಅಧ್ಯಕ್ಷ ಲಿಂಗರಾಜ ಪಾಟೀಲ್‌, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಟೆಂಗಿನಕಾಯಿ, ಸಿದ್ದರಾಜು, ಶಿಕ್ಷಕರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರುವ ಮೋಹನ್‌ ಲಿಂಬಿಕಾಯಿ ಅವರ ಹೆಸರುಗಳೂ ಕೇಳಿ ಬರುತ್ತಿವೆ.

Advertisement

ಲೆಕ್ಕಾಚಾರ ಏನು?
ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವುದರಿಂದ ವಿಧಾನ ಪರಿಷತ್‌ ಹಾಗೂ ರಾಜ್ಯಸಭೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿಯೂ ಸಾಕಷ್ಟು ಲೆಕ್ಕಾಚಾರ ಹಾಕಲಾಗುತ್ತದೆ ಎಂದು ತಿಳಿದು ಬಂದಿದೆ. ಪ್ರಮುಖವಾಗಿ ರಾಜ್ಯಸಭೆಗೆ ಈಗಾಗಲೇ ಹಾಲಿ ಸದಸ್ಯರಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಕೆ.ಸಿ. ರಾಮಮೂರ್ತಿ ಅವರನ್ನೇ ಮುಂದುವರೆಸುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ, ಪಕ್ಷದ ಹೈಕಮಾಂಡ್‌ ತೆರೆಮರೆಯಲ್ಲಿ ಪಕ್ಷಕ್ಕಾಗಿ ದುಡಿದ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಬೇಕು ಎನ್ನುವ ನಿಟ್ಟಿನಲ್ಲಿ ಆಲೋಚನೆ ಮಾಡುತ್ತಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಯಾರಾದರೂ ಅಚ್ಚರಿಯ ವ್ಯಕ್ತಿಗಳನ್ನೂ ರಾಜ್ಯಸಭೆಗೆ ಪರಿಗಣಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next