ಚಿತ್ರದುರ್ಗ: ಜಿಎಸ್‌ಟಿ ಮೂಲಕ ರಾಜ್ಯದ ಪಾಲನ್ನು ಕಬಳಿಸಿ ದೇಶವನ್ನು ದಿವಾಳಿ ಮಾಡಿ, ಹಿಂದುತ್ವದ ಹೆಸರಿನಲ್ಲಿ ಮತ ಪಡೆಯುವ ಪ್ರಧಾನಿ ನರೇಂದ್ರ ಮೋದಿ ಅವರದ್ದು ಗೋಡ್ಸೆ ಹಿಂದುತ್ವ. ಕಾಂಗ್ರೆಸ್ ಪಕ್ಷದ್ದು ಗಾಂಧಿ ಹಿಂದುತ್ವ ಎನ್ನುವುದನ್ನು ಜನರಿಗೆ ಅರ್ಥ ಮಾಡಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಕೆ.ಎನ್. ರಾಜಣ್ಣ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸ್ವಾತಂತ್ರÂದ ಅಮೃತ ಮಹೋತ್ಸವದ ಅಂಗವಾಗಿ 75 ಕಿಮೀ ಪಾದಯಾತ್ರೆ ನಡೆಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸ್ವಾತಂತ್ರÂದ ಅಮೃತ ಮಹೋತ್ಸವ ಪಾದಯಾತ್ರೆಯಲ್ಲಿ ಬಿಜೆಪಿ ದುರಾಡಳಿತವನ್ನು ಜನರಿಗೆ ಮನವರಿಕೆ ಮಾಡಿ ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಸಾಧನೆಗಳನ್ನು ಪ್ರತಿ ಕ್ಷೇತ್ರ, ಗ್ರಾಮ ಪಂಚಾಯಿತಿ,ಹೋಬಳಿ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಚುರಪಡಿಸಲಾಗುವುದು ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಒಂದು ಗಂಟೆಯೊಳಗೆ ಅನ್ನಭಾಗ್ಯ ಯೋಜನೆ ಜಾರಿ ಮಾಡಿದರು. ಆದರೆ ಬಿಜೆಪಿಯವರು ಸುಳ್ಳನ್ನೇ ಸತ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇರುವ ಸತ್ಯವನ್ನು ಧೈರ್ಯವಾಗಿ ಹೇಳಿಕೊಳ್ಳುವ ಮನಃಸ್ಥಿತಿ ಬೆಳೆಸಿಕೊಳ್ಳಬೇಕು. ದಲಿತ ವಿರೋಧಿ , ಮೀಸಲಾತಿ ವಿರೋ ಧಿಯಾಗಿರುವ ಕೋಮುವಾದಿ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿಮಾಡಿಕೊಳ್ಳದೆ ಹೊರಗುತ್ತಿಗೆ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಾ ಮೀಸಲಾತಿಗೆ ಕತ್ತರಿ ಹಾಕುತ್ತಿದೆ.
ಬಡವರು, ರೈತರ ಪರವಾಗಿರುವ ಕಾಂಗ್ರೆಸ್ ಪಕ್ಷ ಶಿಕ್ಷಣಕ್ಕೆ ಒತ್ತು ಕೊಟ್ಟಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್‌ಗೆ ಅನೇಕ ಪೂರ್ವಜರ ತ್ಯಾಗ-ಬಲಿದಾನದ ಇತಿಹಾಸವಿದೆ. ಇದನ್ನು ಇಂದಿನ ಪೀಳಿಗೆಗೆ ಅರ್ಥ ಮಾಡಿಸಬೇಕು ಎಂದರು. ಎಐಸಿಸಿ ಆದೇಶದಂತೆ ನಡೆಯುವ 75 ಕಿಮೀ ಪಾದಯಾತ್ರೆ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರುಕಳಿಸಬೇಕು. ಸ್ವಾತಂತ್ರ್ಯ ಸಂಗ್ರಾಮದಂತೆ ಪಾದಯಾತ್ರೆ ನಡೆಯಬೇಕು.
ಸುಮಾರು ಒಂದು ಲಕ್ಷ ಜನ ಭಾಗವಹಿಸುವ ಈ ಯಾತ್ರೆಯನ್ನು ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ತಿಳಿಸಿದರು. ಮಾಜಿ ಸಚಿವ ಎಚ್. ಆಂಜನೇಯ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಅದಕ್ಕಾಗಿ ಜಿಲ್ಲೆಯಲ್ಲಿ 75 ಕಿಮೀ ಪಾದಯಾತ್ರೆಯನ್ನು ಅರ್ಥಪೂರ್ಣವಾಗಿಸಬೇಕಿದೆ. ನಮ್ಮ ಅನುಕೂಲ ನೋಡಿಕೊಂಡು ಪಾದಯಾತ್ರೆ ಆಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೂ ದೇಶದ ಸ್ವಾತಂತ್ರ್ಯ ದಿನಾಚರಣೆಗೂ ನಂಟಿದೆ. ಅದಕ್ಕಾಗಿ ಜಿಲ್ಲೆಯಲ್ಲಿ 75 ಕಿಮೀ ಪಾದಯಾತ್ರೆ ಹಾಗೂ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಪಾದಯಾತ್ರೆಯನ್ನು ವರ್ಣರಂಜಿತವಾಗಿ ಆಚರಿಸಬೇಕಾಗಿದೆ. ಜೊತೆಗೆ ಸಿದ್ದರಾಮಯ್ಯನವರ 75ನೇ ಜನ್ಮದಿನಾಚರಣೆ ಚುನಾವಣಾ ಪೂರ್ವ ತಯಾರಿ ರೀತಿಯಲ್ಲಿ ಆಗಬೇಕು ಎಂದು ಹೇಳಿದರು. ಮುಖಂಡರಾದ ಹನುಮಲಿ ಷಣ್ಮುಖಪ್ಪ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಜಿಪಂ ಮಾಜಿ ಸದಸ್ಯ ಡಾ| ಯೋಗೇಶ್‌ಬಾಬು, ಜಿಪಂ ಮಾಜಿ ಅಧ್ಯಕ್ಷರಾದ ಶಾಂತಮ್ಮ, ಶಶಿಕಲಾ ಸುರೇಶ್‌ಬಾಬು ಮಾತನಾಡಿದರು. ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ್, ಜಯಸಿಂಹ, ರಾಮಪ್ಪ ನೇರ‌್ಲಗುಂಟೆ, ಮಾಜಿ ಶಾಸಕರಾದ ಬಿ.ಜಿ. ಗೋವಿಂದಪ್ಪ, ಎ.ವಿ. ಉಮಾಪತಿ, ಜಯಮ್ಮ ಬಾಲರಾಜ್, ಜಿಲ್ಲಾಧ್ಯಕ್ಷ ತಾಜ್‌ಪೀರ್, ಮಾಜಿ ಅಧ್ಯಕ್ಷ ಫಾತ್ಯರಾಜನ್, ಬಿ.ಟಿ. ಜಗದೀಶ್ ಮತ್ತಿತರರು ಇದ್ದರು.