Advertisement

ಬಿಜೆಪಿ ಅನೈತಿಕ ರಾಜಕಾರಣಕ್ಕೆ ಹೊಸ ಭಾಷ್ಯ ಬರೆದಿದೆ: ಎಚ್‌ಡಿಕೆ

11:45 PM Jul 21, 2019 | Team Udayavani |

ಬೆಂಗಳೂರು: ಆಡಳಿತಾರೂಢ ಮಿತ್ರ ಪಕ್ಷಗಳ ಶಾಸಕರನ್ನು ಬಲವಂತವಾಗಿ ಕರೆದೊಯ್ದು ಬಿಜೆಪಿ ಪ್ರಜಾಪ್ರಭುತ್ವದ ಅಣಕವಾಡಿದೆ. ಬಿಜೆಪಿ ಕರ್ನಾಟಕದ ರಾಜಕಾರಣವನ್ನು ಪಾತಾಳಕ್ಕೆ ಕೊಂಡೊಯ್ದಿರುವುದಲ್ಲದೆ ದೇಶದಲ್ಲಿ ಅನೈತಿಕ ರಾಜಕಾರಣಕ್ಕೆ ಹೊಸ ಭಾಷ್ಯ ಬರೆದಿರುವುದು ಅತ್ಯಂತ ನೋವಿನ ಹಾಗೂ ಜಿಗುಪ್ಸೆ ತರುವ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಬಿಜೆಪಿ ಮುಖಂಡರು, ಕಾರ್ಯಕರ್ತರು ವಿಶೇಷ ವಿಮಾನಗಳಲ್ಲಿ ಮೈತ್ರಿ ಪಕ್ಷದ ಶಾಸಕರೊಂದಿಗೆ ತೆರಳಿರುವುದು ಮಾಧ್ಯಮಗಳಿಂದ ಸ್ಪಷ್ಟವಾಗಿದೆ. ಅನೈತಿಕ ಹಾಗೂ ಕಾನೂನು ಬಾಹಿರ ವಿಧಾನಗಳಿಂದ ಅಧಿಕಾರಕ್ಕೆ ಬರಲು ಹಾತೊರೆಯುತ್ತಿರುವ ಬಿಜೆಪಿ, ಈ ಎಲ್ಲ ಬೆಳವಣಿಗೆಗಳ ನಡುವೆ, ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದೆ. ವಿಶ್ವಾಸ ನಿಲುವಳಿಯನ್ನು ಮತಕ್ಕೆ ಹಾಕುವಂತೆ ರಾಜಭವನದ ಮೂಲಕ ಗಡುವನ್ನೂ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ನೈತಿಕತೆ ಕುರಿತು ಮಾತನಾಡುತ್ತಲೇ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೂಲತತ್ವ, ಆಶಯಗಳನ್ನೇ ಬುಡಮೇಲು ಮಾಡಲು ಹೊರಟಿರುವುದು ಇಡೀ ದೇಶಕ್ಕೆ ಅರಿವಾಗಬೇಕು. ನಮ್ಮಿಂದ ದೂರ ಹೋಗಿರುವ ಶಾಸಕರು ಹಿಂದಿರುಗಿ, ಅಧಿವೇಶನದಲ್ಲಿ ಪಾಲ್ಗೊಂಡು, ಬಿಜೆಪಿ ಅವರನ್ನು ಹೇಗೆ ಬಲವಂತವಾಗಿ ಕರೆದೊಯ್ದಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಪ್ರಕಟಣೆಯಲ್ಲಿ ಸಿಎಂ ಮನವಿ ಮಾಡಿದ್ದಾರೆ.

“ಯಾವುದೇ ಹಿಂಜರಿಕೆಯಿಲ್ಲದೆ ಬನ್ನಿ, ನಿಮ್ಮ ಸಮಸ್ಯೆಗಳೂ ಸೇರಿದಂತೆ ಎಲ್ಲ ವಿಷಯಗಳ ಕುರಿತು ಒಟ್ಟಾಗಿ ಕುಳಿತು ಮುಕ್ತವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳೋಣ. ಯಾಕೆಂದರೆ, ರಾಜಕೀಯ ಪ್ರಭಾವದ ದುರ್ಬಳಕೆಯ ಮೂಲಕ ಪ್ರಜಾಪ್ರಭುತ್ವದ ಬುನಾದಿಯನ್ನೇ ಅಲುಗಾಡಿಸುತ್ತಿರುವ, ಜನತಂತ್ರದಡಿ ಆಯ್ಕೆಯಾದ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿರುವ ದುಷ್ಟಶಕ್ತಿಗಳಿಂದ ಸರ್ಕಾರವನ್ನು ಪಾರು ಮಾಡಬೇಕಾಗಿದೆ’ ಎಂದು ಕೋರಿಕೊಂಡಿದ್ದಾರೆ.

ಅಧಿಕಾರಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸಾಂವಿಧಾನಿಕವಾಗಿ ರಚಿಸಲಾದ ಸಂಸ್ಥೆಗಳನ್ನೇ ನಾಶಪಡಿಸಲು ಮುಂದಾಗಿರುವ ದುಷ್ಟ ಶಕ್ತಿಗಳಿಂದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ಉಳಿಸಲು ಜತೆಯಾಗಿ ಹೋರಾಟ ನಡೆಸೋಣ ಎಂದು ಅತೃಪ್ತ ಶಾಸಕರಲ್ಲಿ ಪ್ರಕಟಣೆ ಮೂಲಕ ಸಿಎಂ ಮನವಿ ಮಾಡಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next