ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಧಾರ ರಹಿತ ಆರೋಪ ಮತ್ತು ರಫೇಲ್ ಯುದ್ಧ ಖರೀದಿ ವಿಚಾರದಲ್ಲಿ ದೇಶದ ಜನರ ದಿಕ್ಕುತಪ್ಪಿಸಿರುವ ಕಾಂಗ್ರೆಸ್ ಮುಖಂಡ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ ಶನಿವಾರ ದೇಶಾದ್ಯಂತ ಪ್ರತಿಭಟನೆ ನಡೆಸಿ ಆಗ್ರಹಿಸಿದೆ.
ಇಂತಹ ಸುಳ್ಳು ಆರೋಪಗಳ ಮೂಲಕ ವಿದೇಶಗಳಲ್ಲಿ ಭಾರತದ ಮಾನಹರಾಜು ಹಾಕಿರುವುದಾಗಿ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ರಾಹುಲ್ ಗಾಂಧಿ ವಿರುದ್ಧ ಈ ಸಂದರ್ಭದಲ್ಲಿ ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ ವಿರುದ್ಧದ ಆರೋಪಗಳ ಬಗ್ಗೆ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರ ನೀಡಬೇಕು ಎಂದು ಮುಂಬೈಯಲ್ಲಿ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ರಾಹುಲ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಪೋಸ್ಟರ್ ಅನ್ನು ಹರಿದು ಹಾಕಿ, ರಫೇಲ್ ಕುರಿತು ಸುಳ್ಳು ಸುದ್ದಿ ಹಬ್ಬಿಸಿರುವುದಕ್ಕೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಗುರುವಾರ ವಜಾಗೊಳಿಸಿ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿತ್ತು.
ಸುಪ್ರೀಂ ತೀರ್ಪಿನ ನಂತರ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಶನಿವಾರ ದೇಶಾದ್ಯಂತ ಪ್ರತಿಭಟನೆ ನಡೆಸಿ, ಕ್ಷಮೆಯಾಚಿಸುವಂತೆ ಒತ್ತಾಯಿಸಲು ಕರೆ ನೀಡಿತ್ತು.