ಬೆಂಗಳೂರು: ಬಿಜೆಪಿಯವರು ಸಂಕ್ರಾಂತಿಗೆ ಸರ್ಕಾರ ಬಿದ್ದು ಹೋಗುತ್ತದೆ ಎಂದು ಕನಸು ಕಾಣುತ್ತಿದ್ದಾರೆ. ಹೊಸ ಸರ್ಕಾರ ರಚಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರು ರಾಜ್ಯ ಸರ್ಕಾರಕ್ಕೆ ಡೆಡ್‌ಲೈನ್‌ಗಳನ್ನು ನೀಡುತ್ತಲೇ ಇದ್ದಾರೆ. ಆದರೆ, ಯಾವುದೂ ಯಶಸ್ವಿಯಾಗುತ್ತಿಲ್ಲ. ದೇಶದಲ್ಲಿ ನರೇಂದ್ರ ಮೋದಿಯಂತಹ ಭ್ರಷ್ಟ ಪ್ರಧಾನಿಯನ್ನು ನೋಡಿಲ್ಲ. ಅವರಿಗೆ ಸೋಲಿನ ಭಯ ಕಾಡುತ್ತಿದೆ. ರಾಜ್ಯ ಬಿಜೆಪಿ ಗೌರಯುತವಾಗಿ ವಿರೋಧ ಪಕ್ಷವಾಗಿ ಕೆಲಸ ಮಾಡುವುದು ಒಳ್ಳೆಯದು ಎಂದು ಸಲಹೆ ನೀಡಿದರು.
ಜೆಡಿಎಸ್ ನಾಯಕರು ಅವರದೇ ಆದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ. ಜೆಡಿಎಸ್‌ನವರೇ ಐದು ವರ್ಷ ಮುಖ್ಯಮಂತ್ರಿ ಎಂದು ಬರೆದುಕೊಟ್ಟಿದ್ದೇವೆ. ಸರ್ಕಾರಕ್ಕೆ ಹೆಚ್ಚು ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಸಮ್ಮಿಶ್ರ ಸರ್ಕಾರದಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ಕುಳಿತು ಚರ್ಚೆ ಮಾಡಿ ಬಗೆ ಹರಿಸಿಕೊಳ್ಳುತ್ತೇವೆ. ಕಾಂಗ್ರೆಸ್‌ನವರಾಗಲೀ ಜೆಡಿಎಸ್‌ನವರಾಗಲೀ ಬಹಿರಂಗವಾಗಿ ಮಾತನಾಡುವುದು ತಪ್ಪು ಎಂದು ಹೇಳಿದರು.
ಲೋಕಸಭಾ ಚುನಾವಣೆಗೆ ಆದಷ್ಟು ಬೇಗ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ತೀರ್ಮಾನಿಸಿದ್ದೇವೆ. ಸ್ಪರ್ಧೆಗೆ ಯಾವುದೇ ಮಾನದಂಡಗಳ ಬಗ್ಗೆ ತೀರ್ಮಾನವಾಗಿಲ್ಲ. ಹಾಲಿ ಸಂಸದರು ತಮ್ಮ ಕ್ಷೇತ್ರಗಳನ್ನು ಬದಲಾಯಿಸದಂತೆ ಮನವಿ ಮಾಡಿದ್ದಾರೆ. ಹಾಲಿ ಸಂಸದರ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಹೊಂದಾಣಿಕೆ ಸಂದರ್ಭದಲ್ಲಿ ಪರಿಸ್ಥಿತಿ ಹೇಗೆ ಬರುತ್ತದೆಯೋ ನೋಡೋಣ. ಸಂಕ್ರಾಂತಿ ನಂತರ ಜೆಡಿಎಸ್ ನಾಯಕರ ಜೊತೆಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ಈಗಾಗಲೇ ದೇಶಾದ್ಯಂತ ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದೆ. ಚುನಾವಣೆ ಸಿದ್ದತೆ, ಪ್ರಚಾರ ಕಾರ್ಯತಂತ್ರಗಳ ಕುರಿತಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಲ್ಲ ಪಿಸಿಸಿ ಅಧ್ಯಕ್ಷರ ಜೊತೆ ಚರ್ಚೆ ಮಾಡಿದ್ದಾರೆ ಎಂದು ತಿಳಿಸಿದರು.