ಬೆಂಗಳೂರು: ವಿಧಾನಸಭೆಯಲ್ಲಿ ನೂರಕ್ಕೆ ನೂರು ನಾವು ಬಹುಮತ ಸಾಬೀತುಪಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವಿಶ್ವಾಸ ವ್ಯಕ್ತಪಡಿಸಿದರು.
ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಶನಿವಾರ ಭೇಟಿ ನೀಡಿ ಶುಭ ಕೋರಿದ ಬಳಿಕ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಸುಭದ್ರ, ರೈತಪರ, ಜನಪರ ಸರ್ಕಾರವನ್ನು ರಚಿಸಲಿದ್ದೇವೆ. ರಾಜ್ಯ ನಾಯಕರು ವರಿಷ್ಠರನ್ನು ಭೇಟಿಯಾಗಿ ಚರ್ಚಿಸಿ ಮುಂದುವರಿಯಲಿದ್ದಾರೆ ಎಂದು ಹೇಳಿದರು.
ಸಿಎಂ ಯಡಿಯೂರಪ್ಪ ಅವರು ಹೋರಾಟಗಾರರಾಗಿದ್ದು, ಸ್ವಪ್ರಯತ್ನದಿಂದ ರೈತ ನಾಯಕರಾಗಿ ಹೊರಹೊಮ್ಮಿದವರು. ಹಾಗಾಗಿ ಅಧಿಕಾರ ವಹಿಸಿಕೊಂಡ ತಕ್ಷಣ ರೈತ ಪರವಾದ ನಿರ್ಣಯ ಕೈಗೊಂಡಿದ್ದಾರೆ. ಅವರು ತಮ್ಮ ಆಡಳಿತಾವಧಿಯಲ್ಲಿ ಬಡವರು, ಕೂಲಿ ಕಾರ್ಮಿಕರು, ನೇಕಾರರ ಜೀವನ ಗುಣಮಟ್ಟ ಹೆಚ್ಚಿಸಲಿದ್ದಾರೆ ಎಂದು ತಿಳಿಸಿದರು.
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಶಾಸಕರಾದ ಎಂ.ಟಿ.ಬಿ.ನಾಗರಾಜ್, ಬಿ.ಸಿ.ಪಾಟೀಲ್ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಮರಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.
ಜೆಡಿಎಸ್‌ನ ಹಲವು ಶಾಸಕರು ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಮುಂದಾಗಿದ್ದಾರೆ. ನಮ್ಮ ಪಕ್ಷದಲ್ಲಿ ಆ ರೀತಿಯ ಯೋಚನೆ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರದ ಬಗ್ಗೆ ಒಲವು ತೋರಿರುವ ಜೆಡಿಎಸ್ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜೆಡಿಎಸ್ ವರಿಷ್ಠ ನಾಯಕರಿಂದ ಆ ರೀತಿಯ ಮನವಿ ಬಂದರೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ.
-ಎನ್.ರವಿಕುಮಾರ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ.