Advertisement
ಸಂಪುಟ ಪುನಾರಚನೆ ಬಳಿಕ ಸಂಪುಟದಿಂದ ಕೈಬಿಟ್ಟಿರುವ ರಮೇಶ್ ಜಾರಕಿಹೊಳಿ, ಆರ್.ಶಂಕರ್ ತೀವ್ರ ಅಸಮಾಧಾನಗೊಂಡಿದ್ದರೆ, ಸಚಿವ ಸ್ಥಾನದ ಆಕಾಂಕ್ಷಿಗಳು ಕಾಂಗ್ರೆಸ್ ನಾಯಕರ ನಡೆ ಬಗ್ಗೆ ಪ್ರತ್ಯಕ್ಷ, ಪರೋಕ್ಷವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ. ರವಿವಾರ ಕಾಂಗ್ರೆಸ್‌ನ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ, ಶಾಸಕ ಡಾ| ಕೆ.ಸುಧಾಕರ್ ಕೂಡ ಅಸಮಾಧಾನ ಹೊರ ಹಾಕಿದ್ದಾರೆ. ಹಾಗಾಗಿ ಕಾಂಗ್ರೆಸ್‌ನ ಅತೃಪ್ತ ಶಾಸಕರ ಸಂಖ್ಯೆ ಮತ್ತವರ ಮುಂದಿನ ನಡೆಗೆ ಅನುಗುಣವಾಗಿ ಕಾರ್ಯಾಚರಣೆಗಿಳಿಯಲು ಕಮಲ ಪಕ್ಷ ನಿರ್ಧರಿಸಿದೆ ಎನ್ನಲಾಗಿದೆ.
ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಸಿದ್ಧತೆ ಕಾರ್ಯವನ್ನು ಚುರುಕುಗೊಳಿಸಿರುವ ಬಿಜೆಪಿಯು ರಾಜ್ಯದ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಭಿಪ್ರಾಯ ಸಂಗ್ರಹಣೆ ಕಾರ್ಯಕ್ಕೆ ಚಾಲನೆ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ರವಿವಾರ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಭೆ ನಡೆಯಿತು. ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಕುರಿತಂತೆ ಸೋಮವಾರ ಸಭೆ ನಡೆಯಲಿದೆ. ಕೇಂದ್ರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.
Related Articles
Advertisement
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿಗೆ ಬರುವುದು ಊಹಾಪೋಹ. ಬಿಜೆಪಿಯು ಸದನದ ಒಳಗೆ ಮತ್ತು ಹೊರಗೆ ಪ್ರಬಲ ವಿಪಕ್ಷವಾಗಿ ಕಾರ್ಯ ನಿರ್ವಹಿಸುತ್ತಿದೆ. ಕಾಂಗ್ರೆಸ್ ಪಕ್ಷವು ತನ್ನ ಶಾಸಕರನ್ನು ಸಮಾಧಾನಪಡಿಸಿಕೊಂಡು ಹಿಡಿದಿಟ್ಟುಕೊಳ್ಳಬೇಕು. ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಸ್ವತಂತ್ರರಾಗಿರುತ್ತಾರೆ. ಆಮೇಲೆ ಯಾರಾದರೂ ಪಕ್ಷಕ್ಕೆ ಬರುವುದಾದರೆ ಸ್ವಾಗತ. ನಾವು ರಮೇಶ್ ಜಾರಕಿಹೊಳಿ ಅವರನ್ನು ಸಂಪರ್ಕಿಸಿಲ್ಲ. ತಾವಾಗಿಯೇ ರಾಜೀನಾಮೆ ಕೊಟ್ಟು ಹೊರ ಬಂದ ಅನಂತರ ಬಿಜೆಪಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಬರುವುದಾದರೆ ಸ್ವಾಗತ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.