ನವದೆಹಲಿ: ಮುಂಬರುವ 2024ರ ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಜತೆಗೆ ಜೆಡಿಎಸ್ ಕೈಜೋಡಿಸಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿರುವುದಾಗಿ ಇಂಡಿಯಾ ಟುಡೇ ಶುಕ್ರವಾರ (ಸೆಪ್ಟೆಂಬರ್ 08) ವರದಿ ಮಾಡಿದೆ.
ಇದನ್ನೂ ಓದಿ:Kollywood ನಟ- ನಿರ್ದೇಶಕ ಮಾರಿಮುತ್ತು ಇನ್ನಿಲ್ಲ; ಡಬ್ಬಿಂಗ್ ಮಾಡುತ್ತಿರುವಾಗಲೇ ನಿಧನ
ಇತ್ತೀಚೆಗಷ್ಟೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮೈತ್ರಿ ಕುರಿತು ಸುದೀರ್ಘ ಚರ್ಚೆ ನಡೆಸಿರುವುದಾಗಿ ವರದಿ ವಿವರಿಸಿದೆ.
ಚರ್ಚೆಯ ವೇಳೆ ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಕರ್ನಾಟಕದಲ್ಲಿ ನಾಲ್ಕು ಲೋಕಸಭಾ ಸ್ಥಾನ ಬಿಟ್ಟುಕೊಡುವಂತೆ ದೇವೇಗೌಡರು ಬೇಡಿಕೆ ಇಟ್ಟಿದ್ದಾರೆನ್ನಲಾಗಿದೆ. ಹಾಸನ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ಸಮ್ಮತಿಸಿದ್ದು, ಇನ್ನೊಂದು ಕ್ಷೇತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೈತ್ರಿಯ ಹಿನ್ನೆಲೆಯಲ್ಲಿ ಐದು ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಎಚ್.ಡಿ.ದೇವೇಗೌಡರು ಬೇಡಿಕೆ ಇಟ್ಟಿದ್ದಾರೆನ್ನಲಾಗಿದ್ದು, ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರಿಂದ ಮಂಡ್ಯ ಕ್ಷೇತ್ರ ಬಿಟ್ಟುಕೊಡಲು ಜೆ.ಪಿ.ನಡ್ಡಾ ಮತ್ತು ಅಮಿತ್ ಶಾ ನಿರಾಕರಿಸಿರುವುದಾಗಿ ಮೂಲಗಳು ಹೇಳಿವೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗಿನ ಜೆಡಿಎಸ್ ಮೈತ್ರಿ ಸಂಬಂಧ ಇನ್ನೂ ಹೆಚ್ಚಿನ ಮಾತುಕತೆ ನಡೆಯುವ ಹಂತದಲ್ಲಿದೆ ಎಂದು ವರದಿ ತಿಳಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಟ್ಟು 28 ಸ್ಥಾನಗಳಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸುಮಲತಾ ಗೆಲುವು ಸಾಧಿಸಿದ್ದು, ಕಾಂಗ್ರೆಸ್(ಬೆಂಗಳೂರು ಗ್ರಾಮಾಂತರ0 ಮತ್ತು ಜೆಡಿಎಸ್(ಹಾಸನ) ತಲಾ ಒಂದು ಕ್ಷೇತ್ರದಲ್ಲಿ ಜಯ ಗಳಿಸಿತ್ತು.