ಬೆಂಗಳೂರು: ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಬಿಜೆಪಿ ವರಿಷ್ಠರ ಜತೆಗೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಸಂಜೆ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಎರಡು ದಿನ ದಿಲ್ಲಿಯಲ್ಲಿ ವಾಸ್ತವ್ಯ ಹೂಡಲಿರುವ ಎಚ್.ಡಿ. ಕುಮಾರಸ್ವಾಮಿ, ಮಂಗಳವಾರ ಅಥವಾ ಬುಧವಾರ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಕುಮಾರಸ್ವಾಮಿ ಅವರ ಜತೆ ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖೀಲ್ ಕುಮಾರಸ್ವಾಮಿ ಅವರೂ ತೆರಳಲಿದ್ದಾರೆ ಎನ್ನಲಾಗಿದೆ.
ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ. ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧಿಸಲಿದ್ದಾರೆ. ಮಾಜಿ ಸಂಸದ ಸಿ.ಎಸ್. ಪುಟ್ಟರಾಜು ಅಥವಾ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರ ಹೆಸರು ಮುಂಚೂಣಿಯಲ್ಲಿದೆ. ಉಳಿದಂತೆ ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಇರಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಾ| ಸಿ.ಎನ್.ಮಂಜುನಾಥ್ ಬಿಜೆಪಿ ಅಭ್ಯರ್ಥಿ ಆಗಲಿದ್ದಾರೆ. ಅದೇ ರೀತಿ ತುಮಕೂರಿನಿಂದ ವಿ.ಸೋಮಣ್ಣ ಜೆಡಿಎಸ್ ಅಭ್ಯರ್ಥಿ ಆಗಲಿದ್ದಾರೆ ಎಂಬ ಲೆಕ್ಕಚಾರಗಳಿವೆ. ಆದರೆ, ತುಮಕೂರಿನಲ್ಲಿ ಜೆಡಿಎಸ್‌ನ ಸಮರ್ಥ ಅಭ್ಯರ್ಥಿ, ಪಕ್ಷಕ್ಕೆ ಶಕ್ತಿ’, ‘ಸಂಪನ್ಮೂಲ’ ಇಲ್ಲದ ಕಾರಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಸಾಧ್ಯತೆಗಳೇ ಹೆಚ್ಚಿವೆ ಎಂದು ಜೆಡಿಎಸ್ ಮೂಲಗಳು ಹೇಳಿವೆ.