Advertisement
ಭಾನುವಾರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಪ್ರಮುಖ ನಾಯಕರ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ ಅನೇಕ ಹಗರಣಗಳ ಕುರಿತು ತಾರ್ಕಿಕ ಅಂತ್ಯ ಕಾಣಿಸಲು ಆಗಿಲ್ಲ. ಹೀಗಾಗಿ ಆ ಪ್ರಕರಣಗಳ ಬಗ್ಗೆ ಈಗ ದಾಖಲೆಗಳನ್ನು ಬಿಡುಗಡೆ ಮಾಡಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ರಾಜ್ಯ ಸರ್ಕಾರದ ವಿರುದ್ಧ ನಿರಂತರವಾಗಿ 40 ಪರ್ಸೆಂಟ್ ಲಂಚದ ಆರೋಪ ಮಾಡುತ್ತಿದ್ದಾರೆ. ಆರೋಪಗಳಿಗೆ ಸಂಬಂಧಿಸಿ ಸೂಕ್ತ ದಾಖಲೆ ಕೇಳಿದರೂ, ಅವರು ದಾಖಲೆ ನೀಡದೇ ಆರೋಪ ಮುಂದುವರಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರಕರಣ ದಾಖಲಿಸಲು ಬಿಜೆಪಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
Related Articles
ವಿಧಾನಸಭೆ ಚುನಾವಣೆಗೆ ಪೂರಕವಾಗಿ ರಾಜ್ಯ ಪ್ರವಾಸಗಳನ್ನು ಕೈಗೊಳ್ಳುವ ಬಗ್ಗೆಯೂ ನಿರ್ಧರಿಸಲಾಗಿದೆ. ಸೆ.23ರವರೆಗೆ ನಡೆಯುವ ರಾಜ್ಯ ವಿಧಾನಮಂಡಲದ ಅಧಿವೇಶನದ ನಂತರ ರಾಜ್ಯ ಪ್ರವಾಸ ಆರಂಭಿಸಲು ತೀರ್ಮಾನಿಸಲಾಯಿತು ಎಂದು ತಿಳಿದು ಬಂದಿದೆ. ಈಗಾಗಲೇ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ಕಟೀಲ್ ನೇತೃತ್ವದಲ್ಲಿ ತಲಾ 50 ಕ್ಷೇತ್ರಗಳಲ್ಲಿ ಪ್ರವಾಸ ಮಾಡುವ ಕುರಿತು ನಿರ್ಧರಿಸಲಾಗಿತ್ತು. ಈಗ ಮಾಜಿ ಸಿಎಂ ಯಡಿಯೂರಪ್ಪ ಅವರು ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕಗೊಂಡ ನಂತರ ಪ್ರವಾಸದ ತಂಡಗಳನ್ನು ರಚಿಸುವ ಬಗ್ಗೆ ಪಕ್ಷದ ಮಟ್ಟದಲ್ಲಿ ಗೊಂದಲ ಉಂಟಾಗಿದೆ ಎನ್ನಲಾಗಿದ್ದು, ಮತ್ತೆ ಇನ್ನೆರಡು ತಂಡಗಳ ರಚನೆ ಸಾಧ್ಯತೆಯೂ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
ಕಾಂಗ್ರೆಸ್ ಕಾಲದಲ್ಲಿ ನಡೆಸಿ ಮರೆಮಾಚಲಾದ ಹಗರಣಗಳನ್ನೂ ಬಯಲಿಗೆ ಎಳೆಯಬೇಕು. ಆ ಹಗರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ.– ಸಿ.ಟಿ.ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ