Advertisement

ಸ್ವಾತಂತ್ರ್ಯ ಹೋರಾಟಗಾರರ ಹೆಸರು ದುರ್ಬಳಕೆ

05:30 PM Sep 29, 2020 | Suhan S |

ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಬಳಸಿಕೊಂಡು ಎಪ್ಪತ್ತು ವರ್ಷಗಳ ಕಾಲ ದೇಶದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್‌, ಈಗ ಅಧಿಕಾರ ಕಳೆದುಕೊಂಡು ಬಿಜೆಪಿ ವಿರುದ್ದ ಅಪಪ್ರಚಾರದಲ್ಲಿ ತೊಡಗಿದೆ. ಪ್ರಧಾನಿ ನರೇಂದ್ರ ಮೋದಿ ಎಂದೂ ರೈತ ವಿರೋಧಿಯಲ್ಲ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

Advertisement

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರುದ್ದ ರೈತರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್‌ ನಾಯಕರು ಎತ್ತಿ ಕಟ್ಟುತ್ತಿದ್ದಾರೆ ಎಂದರು.

ಈವರೆಗೆ ರೈತರು ಎಪಿಎಂಸಿಗೆ ಕೊಡುತ್ತಿದ್ದ 1 ರೂ. ಸೆಸ್‌ ಅನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ 35 ಪೈಸೆಗೆ ಇಳಿಸಿದ್ದಾರೆ. ಇದರಿಂದ ರೈತರಿಗೆ ಅನುಕೂಲವಾಗುವುದಿಲ್ಲವೇ ಎಂದು ಪ್ರಶ್ನಿಸಿದ ಶಾಸಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಲ್ಲಾಲರ ಪರವಾಗಿ ಮಾತನಾಡುತ್ತಿರುವುದು ಕಾಂಗ್ರೆಸ್‌ನವರ ಗೋಸುಂಬೆತನಕ್ಕೆ ಸಾಕ್ಷಿಯಾಗಿದೆ ಎಂದು ಕಿಡಿ ಕಾರಿದರು.

79 ಎ,ಬಿ ಕಾಯ್ದೆ ಅಡಿಯಲ್ಲಿ ರಾಜ್ಯದಲ್ಲಿ 13 ಸಾವಿರ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ. ಲಕ್ಷಾಂತರ ಕೋಟಿ ರೂ. ಲೂಟಿಯಾಗಿದೆ. ಈ ಬಗ್ಗೆ ಕಂದಾಯ ಸಚಿವ ಆರ್‌.ಅಶೋಕ್‌ 1971 ರಿಂದ ಈವರೆಗಿನ ಎಲ್ಲಾ ದಾಖಲೆ ಇಟ್ಟುಕೊಂಡು ಅಧಿವೇಶನದಲ್ಲಿ ಮಾತನಾಡಿದ್ದಾರೆ. ಆದರೆ ರೈತರು, ಹೋರಾಟಗಾರರು ಯಾಕೆ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದರು.

ವಿಭಾಗ ಪ್ರಭಾರಿ ಜಿ.ಎಂ. ಸುರೇಶ್‌ ಮಾತನಾಡಿ, ಬಿಜೆಪಿಯಲ್ಲಿ ಅನೇಕರಿಗೆ ಹೊಸ ಹೊಸ ಜವಾಬ್ದಾರಿ ಸಿಕ್ಕಿದೆ. ಮೂರು ವರ್ಷಕ್ಕೊಮ್ಮೆ ಪದಾ ಕಾರಿಗಳನ್ನು ಬದಲಾವಣೆ ಮಾಡುವುದು ಪಕ್ಷದ ನಿಯಮ. ಕೊಟ್ಟಿರುವ ಜವಾಬ್ದಾರಿಯನ್ನು ಪದಾ ಕಾರಿಗಳು ಹೇಗೆ ನಿಭಾಯಿಸುತ್ತಾರೆ ಎನ್ನುವುದನ್ನು ಪಕ್ಷ ಗಮನಿಸುತ್ತದೆ. ಕಾಟಾಚಾರಕ್ಕೆ ಕೆಲಸ ಮಾಡಿದರೆ ಪ್ರಯೋಜನವಿಲ್ಲ ಎಂದು ಹೇಳಿದರು.

Advertisement

ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್‌ ಯಾದವ್‌ ಮಾತನಾಡಿ, ಹಿಂದುಳಿದ ವರ್ಗಗಳಿಗೆ ಸೇರಿದ ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸಿ ಪಕ್ಷಕ್ಕೆ ಜೋಡಿಸುವ ಪ್ರಾಮಾಣಿಕ ಕೆಲಸ ಮಾಡಿದಾಗ ಮಾತ್ರ ಎಲ್ಲರಿಗೂ ರಾಜಕೀಯ ಪ್ರಾತಿನಿಧ್ಯ ಸಿಗುತ್ತದೆ. ಜಿಲ್ಲೆಯಲ್ಲಿ ಶೇ.40 ರಷ್ಟು ಹಿಂದುಳಿದ ವರ್ಗಗಳಿದ್ದರೂ ಬಿಜೆಪಿಗೆ ಕರೆತರುವ ಕೆಲಸವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಮೋರ್ಚಾ ಪದಾಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಬೇಕಿದೆ ಎಂದರು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕಾಡುಗೊಲ್ಲ ಅಭಿವೃದ್ದಿ ನಿಗಮ ಸ್ಥಾಪಿಸುವ ಘೋಷಣೆ ಮಾಡಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ಸ್ವಾಗತಿಸಿದರು. ಒಬಿಸಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಪ್ರವೀಣ್‌ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸಂಪತ್‌ಕುಮಾರ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್‌ ಸಿದ್ದಾಪುರ, ವೆಂಕಟಸ್ವಾಮಿ, ಅಜ್ಜಪ್ಪ, ಶಿವಣ್ಣಾಚಾರ್‌ ವೇದಿಕೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next