ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ನಿಯಮಿತದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಹೊತ್ತಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿತ್ತು.
ಚನ್ನಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕ್ಯಾತ್ಸಂದ್ರ ಟೋಲ್ ಬಳಿ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣದಲ್ಲಿ ಮಾ.7 ರಂದು ಶಾಸಕ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಇನ್ನೊಂದೆಡೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪ್ರತಿಕ್ರಿಯೆ ಕೇಳಿತ್ತು.
ಆಪಾದಿತ ಹಗರಣ ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಸಂಬಂಧಿಸಿದೆ, ಇದರಲ್ಲಿ 81 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಡಲಾಗಿದೆ ಎಂದು ಆರೋಪಿಸಲಾಗಿದೆ. ಅವರ ಪರವಾಗಿ ಈ ಲಂಚದ 40 ಲಕ್ಷ ರೂ.ಗಳನ್ನು ಪಡೆಯುತ್ತಿದ್ದಾಗ ಅವರ ಮಗ ಸಿಕ್ಕಿಬಿದ್ದಿದ್ದಾನೆ ಎನ್ನಲಾಗಿದೆ. ಪುತ್ರ ಪ್ರಶಾಂತ್ ಬಂಧನದ ನಂತರ ಲೋಕಾಯುಕ್ತ ಪೊಲೀಸರು ಮಾಡಾಳ್ ಅವರ ಮನೆ ಮತ್ತು ಕಚೇರಿಗಳಲ್ಲಿ ಹೆಚ್ಚಿನ ಶೋಧ ಕಾರ್ಯಾಚರಣೆ ನಡೆಸಿ 8.23 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದರು.