ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ಒಂದು ಸ್ಥಾನಕ್ಕಾಗಿ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿ ಹಾಕುತ್ತಾ ಎಂಬುದು ಕುತೂಹಲ ಮೂಡಿಸಿದೆ. ಈ ಮಧ್ಯೆ ಕಾಂಗ್ರೆಸ್‌ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಬಯಸಿದೆಯಾದರೂ ಸಂಖ್ಯಾಬಲ ಕೊರತೆ ಇರುವುದರಿಂದ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ.
ಡಿ.5 ರವರೆಗೂ ನಾಮಪ್ರ ಸಲ್ಲಿಕೆಗೆ ಕಾಲಾವಕಾಶವಿದೆ.ಎರಡೂ ಪಕ್ಷಗಳಿಂದ ನಾಮಪತ್ರ ಸಲ್ಲಿಕೆಯಾದರೆ ಡಿ.12 ರಂದು ಚುನಾವಣೆ ನಡೆಯಲಿದೆ. ಉಪ ಚುನಾವಣೆ ಫಲಿತಾಂಶ ಡಿ.9 ರಂದು ಬರಲಿರುವುದರಿಂದ ಕಾಂಗ್ರೆಸ್ ಅಥವಾ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಕೆ ಮಾಡಿದರೆ ಕಣ ರಂಗೇರಲಿದೆ. ಇಲ್ಲದಿದ್ದರೆ ಕೆ.ಸಿ.ರಾಮಮೂರ್ತಿ ಅವಿರೋಧ ಆಯ್ಕೆ ಆಗುವ ಸಾಧ್ಯತೆಯಿದೆ.
ಕಾಂಗ್ರೆಸ್ ವತಿಯಿಂದ ರಾಜ್ಯಸಭೆ ಸದಸ್ಯರಾಗಿದ್ದ ಕೆ.ಸಿ.ರಾಮಮೂರ್ತಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ನಾಮಪತ್ರ ಸಲ್ಲಿಸಿದರು.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಚಿವ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ ಅವರೊಂದಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ನಂತರ ಮಾತನಾಡಿದ ಕೆ.ಸಿ.ರಾಮಮೂರ್ತಿ, ದೇಶದ ಅಭಿವೃದ್ಧಿ ದೃಷ್ಟಿಯಿಂದ ನಾನು ಬಿಜೆಪಿ ಸೇರಿದ್ದೇನೆ. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೊಂದಿದ್ದೇನೆ ಎಂದು ಹೇಳಿದರು.
ಐಟಿ-ಇಡಿ ದಾಳಿ ಭಯದಿಂದ ಬಿಜೆಪಿ ಸೇರಿದರೇ ಎಂಬ ಪ್ರಶ್ನೆಗೆ, ನಾನು ಮೊದಲೇ ಈ ಬಗ್ಗೆ ಸ್ಪಷ್ಟಪಡಿಸಿದ್ದೇನೆ. ಆ ರೀತಿಯ ಯಾವುದೇ ಭಯದಿಂದ ಸೇರಿಲ್ಲ. ದೇಶ ಹಾಗೂ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಬಿಜೆಪಿ ನಾಯಕತ್ವ ಮೆಚ್ಚಿ ಸೇರಿದ್ದೇನೆ ಎಂದು ತಿಳಿಸಿದರು.