Advertisement

ಬೆಂಗ್ಳೂರಲ್ಲಿಂದು ಬಿಜೆಪಿ ಪರಿವರ್ತನಾ ಯಾತ್ರೆ

06:10 AM Jan 07, 2018 | Team Udayavani |

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ ಬೆಳಗ್ಗೆ ವಿಜಯನಗರದ ಎಂ.ಸಿ.ಬಡಾವಣೆಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಪ್ರಮುಖ ಭಾಷಣ ಮಾಡಲಿದ್ದಾರೆ.

Advertisement

ಪರಿವರ್ತನಾ ಯಾತ್ರೆಯ ಉದ್ಘಾಟನೆಯ ನಂತರ ಬೆಂಗಳೂರಿನಲ್ಲಿ ನಡೆದ ಎರಡು ಸಮಾವೇಶಗಳಲ್ಲೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು. ಭಾನುವಾರ ನಡೆಯಲಿರುವ ಪರಿವರ್ತನಾ ಯಾತ್ರೆಯ ಮೂರನೇ ಸಮಾವೇಶಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಮತ್ತು ಸಾರ್ವಜನಿಕರನ್ನು ಸೇರಿಸಲು ಬಿಜೆಪಿ ನಾಯಕರು ಪಣತೊಟ್ಟಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನವೆಂಬರ್‌ ತಿಂಗಳಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ ಆರಂಭಿಸಿದ್ದರು. ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಬಂದಿದ್ದರು. ಉದ್ಘಾಟನಾ ಸಮಾರಂಭದಲ್ಲಿ ನಿರೀಕ್ಷೆಯಷ್ಟು ಜನ ಸೇರದೇ ಇದ್ದದ್ದರಿಂದ ಶಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದಾದ‌ ನಂತರ ರಾಜ್ಯದ ಉದ್ದಕ್ಕೂ ನಡೆದ ಪರಿವರ್ತನಾ ಯಾತ್ರೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಜತೆಗೆ ಬೆಂಗಳೂರಿನಲ್ಲಿ ನಡೆದ ಎರಡು ಸಮಾವೇಶದಲ್ಲೂ ನಿರೀಕ್ಷಿತ ಮಟ್ಟದಲ್ಲಿ ಜನ ಸೇರಿದ್ದರು. ಭಾನುವಾರ ನಡೆಯಲಿರುವ ಸಮಾವೇಶದಲ್ಲೂ ಸಾಕಷ್ಟು ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಬೇಕಾದ ಸಿದ್ಧತೆ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ, ಮೇಲ್ಮನೆ ಸದಸ್ಯ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ನಡೆದಿದೆ. ಬಿಜೆಪಿಯ ಫೈರ್‌ಬ್ರ್ಯಾಂಡ್‌ ಎಂದೇ ಖ್ಯಾತಿ ಪಡೆದಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಅವರು ಪ್ರಮುಖ ಭಾಷಣ ಮಾಡುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆಯೂ ಇದೆ.

ಸಮಾವೇಶಕ್ಕೆ ವೇದಿಕೆ ಸಿದ್ಧವಾಗಿದ್ದು, ಬೆಳಗ್ಗೆ 10ಕ್ಕೆ ಆರಂಭವಾಲಿರುವ ಸಮಾವೇಶವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್‌ ರಾವ್‌, ಚುನಾವಣಾ ಉಸ್ತುವಾರಿ, ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌, ಸಹ ಉಸ್ತುವಾರಿ, ಕೇಂದ್ರ ಸಚಿವ ಪಿಯೂಷ್‌ ಗೋಯಲ್‌, ಕೇಂದ್ರ ಸಚಿವರಾದ ಅನಂತ ಕುಮಾರ್‌, ಸದಾನಂದ ಗೌಡ, ಬಿಜೆಪಿ ಮುಖಂಡರಾದ ಜಗದೀಶ್‌ ಶೆಟ್ಟರ್‌, ಆರ್‌.ಅಶೋಕ್‌, ಕೆ.ಎಸ್‌.ಈಶ್ವರಪ್ಪ, ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ, ಸಿ.ಟಿ.ರವಿ, ಗೋವಿಂದ ಕಾರಜೋಳ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಚಾಲಕ, ಮೇಲ್ಮನೆ ಸದಸ್ಯ ವಿ.ಸೋಮಣ್ಣ  ತಿಳಿಸಿ¨ªಾರೆ.

Advertisement

ಆದಿಚುಂಚನಗಿರಿ ಶಾಖಾ ಮಠದಲ್ಲಿ ಆದಿತ್ಯನಾಥ್‌ ವಾಸ್ತವ್ಯ!
ಶನಿವಾರ ರಾತ್ರಿ ಬೆಂಗಳೂರಿಗೆ ಬಂದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ನಗರದ ಕುಂಬಳಗೋಡಿನ ಆದಿಚುಂಚನಗಿರಿಯ ಶಾಖಾ ಮಠದ ಕಾಲೇಜು ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್‌ ಅವರೊಂದಿಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರು ಇರಲಿದ್ದಾರೆ. ಭಾನುವಾರ ಬೆಳಗ್ಗೆ ಯೋಗಿ ಆದಿತ್ಯನಾಥ್‌ ಅವರು ಕುಂಬಳಗೋಡಿನಿಂದ ನೇರವಾಗಿ ವಿಜಯನಗರ ಆದಿಚುಂಚನಗಿರಿ ಶಾಖಾ ಮಠಕ್ಕೆ ತೆರಳಿ ಮಠದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಲಕ್ನೋದಲ್ಲಿ ಹವಾಮಾನ ವೈಪರೀತ್ಯ ಇರುವುದರಿಂದ ಭಾನುವಾರ ರಾತ್ರಿಯೇ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಬಿಜೆಪಿ ಮೂಲ ಸ್ಪಷ್ಟಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next