ಬೆಂಗಳೂರು: ಸದಸ್ಯತ್ವ ಅಭಿಯಾನ ಜು. 6ರಿಂದ ಆ.11ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿದ್ಧತಾ ಕಾರ್ಯವನ್ನು ಚುರುಕುಗೊಳಿಸಿರುವ ಬಿಜೆಪಿ, ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳ ಪರಿಣಾಮಕಾರಿ ಬಳಕೆ ಕುರಿತು ಸಭೆ ನಡೆಯಿತು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಎನ್.ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಬಾಲಾಜಿ ಸೇರಿದಂತೆ ಇತರ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಈಗಾಗಲೇ ಬಿಜೆಪಿ 80 ಲಕ್ಷ ಸದಸ್ಯತ್ವ ಹೊಂದಿದ್ದು, ಇನ್ನೂ 50 ಲಕ್ಷ ಸದಸ್ಯತ್ವ ಸೇರ್ಪಡೆ ಗುರಿ ಹೊಂದಿದೆ. ಈ ಹಿನ್ನೆಲೆಯಲ್ಲಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಪೂರ್ವ ಸಿದ್ಧತಾ ಕಾರ್ಯಗಳಿಗೆ ಚಾಲನೆ ನೀಡಿದೆ.
ದೇಶಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಲಿದ್ದು, ಅದಕ್ಕೆ ಪೂರಕವಾಗಿ ರಾಜ್ಯದಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ಬಗ್ಗೆ ಚರ್ಚೆ ನಡೆಯಿತು. ನಗರ, ಗ್ರಾಮಾಂತರ ಪ್ರದೇಶ, ವಿಧಾನಸಭಾ ಕ್ಷೇತ್ರದ ಸ್ವರೂಪಕ್ಕೆ ತಕ್ಕಂತೆ ಸಾಮಾಜಿಕ ಜಾಲತಾಣ ಬಳಸಿಕೊಳ್ಳಲು ಒತ್ತು ನೀಡುವ ಬಗ್ಗೆ ಚರ್ಚೆ ನಡೆಯಿತು ಎಂದು ಸಭೆಯಲ್ಲಿದ್ದ ಪ್ರಮುಖರೊಬ್ಬರು ತಿಳಿಸಿದರು.
ಕಳೆದ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಲಿ ಎಂಬ ಆಶಯದೊಂದಿಗೆ ಹಲವರು ಸ್ವಇಚ್ಛೆಯಿಂದ ತಂಡದೊಂದಿಗೆ ನಾನಾ ಕಾರ್ಯ ಚಟುವಟಿಕೆ ನಡೆಸಿದ್ದಾರೆ. ಆ ರೀತಿ ಪಕ್ಷ ಹಾಗೂ ನಾಯಕತ್ವದ ಬಗ್ಗೆ ಒಲವು ಉಳ್ಳವರು ಸೇರಿದಂತೆ ಹೊಸಬರನ್ನು ಸದಸ್ಯರನ್ನಾಗಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣವನ್ನು ಉತ್ತಮವಾಗಿ ಬಳಸಿಕೊಳ್ಳುವ ಬಗ್ಗೆ ಚರ್ಚಿಸಲಾಗಿದ್ದು, ಅಭಿಯಾನದ ಸಂದರ್ಭದಲ್ಲಿ ಹಂತ, ಹಂತವಾಗಿ ಇದನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾ ಕೇಂದ್ರಗಳಲ್ಲಿ ಚಾಲನೆ: ಜು. 6ರಂದು ದೇಶಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭವಾಗಲಿದ್ದು, ಆ ದಿನ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಇತರ ಪ್ರಮುಖರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಜ್ಯ ಸದಸ್ಯತ್ವ ಅಭಿಯಾನ ರಾಜ್ಯ ಸಂಚಾಲಕ ಎನ್.ರವಿಕುಮಾರ್ ತಿಳಿಸಿದರು.