ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣ ಸೇರಿದಂತೆ ರಾಜ್ಯ ಸರಕಾರದ ಅಕ್ರಮದ ವಿರುದ್ಧ ಗುರು ವಾರವೂ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 10.30ಕ್ಕೆ ಸಾಂಕೇತಿಕ ಪ್ರತಿಭಟನೆ ನಡೆಸಿಯೇ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸದನಕ್ಕೆ ಪ್ರವೇಶಿಸಲಿದ್ದಾರೆ. ಆದರೆ ಗುರುವಾರ ನಡೆಸಲು ಉದ್ದೇಶಿಸಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಸದ್ಯಕ್ಕೆ ಕೈ ಬಿಡಲಾಗಿದೆ.
ಸೋಮವಾರದ ಬಳಿಕ ಇಂಥ ಪ್ರಬಲ ಅಸ್ತ್ರ ಪ್ರಯೋಗಿಸಿ ಸಿಎಂ ರಾಜೀನಾಮೆಗೆ ಆಗ್ರಹಿಸಲು ಬಿಜೆಪಿ ಜೆಡಿಎಸ್ ನಿರ್ಧರಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಸರಕಾರವು ಹಗರಣಗಳ ಸರಮಾಲೆಯಲ್ಲಿ ಸಿಲುಕಿಕೊಂಡಿದೆ ಎಂದರು.
ಕಳೆದ ಬಾರಿ ಸಿದ್ದರಾಮಯ್ಯ 5 ವರ್ಷಗಳನ್ನು ಯಾವುದೇ ಸಮಸ್ಯೆ ಇಲ್ಲದೆ ಪೂರ್ಣಗೊಳಿಸಿದ್ದರು. ಈ ಬಾರಿ ಬ್ರಹ್ಮಾಂಡ ಭ್ರಷ್ಟಾಚಾರಗಳು ನಡೆದಿವೆ. ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವುದರಿಂದ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೂ ಸಾವಿರಾರು ಕೋಟಿ ನಷ್ಟವಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದಲ್ಲದೆ, ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದರು.
ಇಂದು ಸಿಎಂ ಉತ್ತರ
ವಾಲ್ಮೀಕಿ ನಿಗಮದಲ್ಲಿ ನಡೆದ ಅಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಗುರುವಾರ ಸದನದಲ್ಲಿ ಉತ್ತರ ನೀಡಲಿದ್ದಾರೆ. ಆ ಬಳಿಕ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿದ ವಿಚಾರದ ಬಗ್ಗೆ ಬಿಜೆಪಿ ಚರ್ಚೆ ಪ್ರಾರಂಭಿಸಲಿದೆ.