Advertisement

ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

09:26 PM May 06, 2019 | Lakshmi GovindaRaj |

ಮೈಸೂರು: ರಾಜ್ಯದ ಗೃಹ ಸಚಿವ ಎಂ.ಬಿ. ಪಾಟೀಲ್‌ ಅವರ ದಬ್ಟಾಳಿಕೆ, ಅಭಿವ್ಯಕ್ತಿ ಸ್ವಾತಂತ್ರ್ಯ ಹರಣದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಆಗ್ರಹಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

Advertisement

ಕಳೆದ ಹಲವು ದಿನಗಳಿಂದ ಸಮ್ಮಿಶ್ರ ಸರ್ಕಾರ ಮಾಧ್ಯಮ ಸೇರಿದಂತೆ ರಾಜ್ಯದ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ಕ್ರಮ ಕೈಗೊಳ್ಳುತ್ತಿದೆ. ಅನೇಕ ಪ್ರಸಂಗಗಳಲ್ಲಿ ಬಿಜೆಪಿ ತನ್ನ ವಿರುದ್ಧ ನಡೆಯುತ್ತಿರುವ ಸೇಡಿನ ಕ್ರಮಗಳ ವಿರುದ್ಧ ದೂರು ನೀಡಿದ್ದರೂ ಈವರೆಗೂ ಯಾವುದೇ ಕ್ರಮ ವಹಿಸಿಲ್ಲ. ಬದಲಿಗೆ ರಾಜಕೀಯ ಎದುರಾಳಿಗಳ ವಿರುದ್ಧ ಪ್ರತೀಕಾರದ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಬೆದರಿಕೆ: ಪ್ರಧಾನಿ ಮೋದಿ ಹತ್ಯೆ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಕ್ರಮ ಜರುಗಿಸಿಲ್ಲ. ನಟರಾದ ದರ್ಶನ್‌ ಮತ್ತು ಯಶ್‌ ಅವರಿಗೆ ನೇರವಾಗಿ ಬೆದರಿಕೆ ಹಾಕಿದ್ದ ಜೆಡಿಎಸ್‌ ಶಾಸಕ ನಾರಾಯಣಗೌಡ ವಿರುದ್ಧ ಕ್ರಮ ವಹಿಸಿಲ್ಲ.

ಸಮ್ಮಿಶ್ರ ಸರ್ಕಾರ, ಸಚಿವರನ್ನು ಟೀಕಿಸುವ ಮಾಧ್ಯಮದವರಲ್ಲಿ ಭಯದ ವಾತಾವರಣ ಮೂಡಿಸಿದ್ದಾರೆ. ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಧ್ಯಮಗಳನ್ನು ಬಹಿಷ್ಕರಿಸುವುದಾಗಿ ಹೇಳಿರುವುದು ಸರ್ವಾಧಿಕಾರಿ ಮನೋಭಾವದ ಪ್ರತೀಕವಾಗಿದೆ. ರಾಜ್ಯ ಸರ್ಕಾರದ ಧೋರಣೆ ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗಿದೆ ಎಂದು ದೂರಿದರು.

ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ: ಕೆಲವು ಪ್ರಕರಣಗಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಕೇವಲ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಅಭಿಮಾನಿಗಳನ್ನು ಬಂಧಿಸಲಾಗಿದೆ. ಸಮ್ಮಿಶ್ರ ಸರ್ಕಾರ ವಿರೋಧಿಸುವವರ ಧ್ವನಿ ಅಡಗಿಸುವ ಇಂತಹ ಕೃತ್ಯಗಳ ಜೊತೆಗೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗುತ್ತಿದ್ದರೂ, ಮುಖ್ಯಮಂತ್ರಿಯವರು ಕೂಡ ದಿವ್ಯ ಮೌನಕ್ಕೆ ಶರಣಾಗಿರುವುದು ಹಲವು ಅನುಮಾನ ಹುಟ್ಟುಹಾಕಿದೆ ಎಂದು ಆರೋಪಿಸಿದರು.

Advertisement

ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ಕಾರಣಕ್ಕೆ ಬಿಜೆಪಿ ಹಿತೈಷಿಗಳು ಮತ್ತು ಹಿರಿಯ ಪತ್ರಕರ್ತರನ್ನು ಕಾರಾಗೃಹಕ್ಕೆ ಕಳುಹಿಸಲು ಸ್ವತಃ ಗೃಹ ಸಚಿವ ಎಂ.ಬಿ. ಪಾಟೀಲ್‌ ವಿಶೇಷ ಆಸಕ್ತಿ ವಹಿಸಿದ್ದಾರೆ. ಪತ್ರಕರ್ತರ ವಿರುದ್ಧ ನಿರಾಧಾರವಾದ ಪ್ರಕರಣಗಳನ್ನು ದಾಖಲಿಸಿ ಮಾನಸಿಕ ಕಿರುಕುಳ ನೀಡಲಾಗಿದೆ. ಬಿಜೆಪಿ ಬಗ್ಗೆ ಅಭಿಮಾನ ಹೊಂದಿದ್ದಾರೆಂಬ ಕಾರಣಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಿ ಸೇಡಿನ ಕ್ರಮ ಜರುಗಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಷಯದಲ್ಲಿ ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಿ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರ ಹಕ್ಕು, ಸ್ವಾತಂತ್ರ್ಯವನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಭಾಯಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಬೇಕು. ಹಾಗೂ ರಾಜಕೀಯ ದ್ವೇಷವನ್ನು ಬದಿಗಿಟ್ಟು ಆಡಳಿತ ನಡೆಸಲು ಸರ್ಕಾರಕ್ಕೆ ಸೂಚಿಸಬೇಕು ಎಂದು ಅವರು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಮಾಜಿ ಸಚಿವ ಕೋಟೆ ಎಂ. ಶಿವಣ್ಣ, ಮಾಜಿ ಮೇಯರ್‌ ಸಂದೇಶ್‌ ಸ್ವಾಮಿ, ನಗರ ಪಾಲಿಕೆ ಸದಸ್ಯರಾದ ಶಿವಕುಮಾರ್‌, ಪ್ರಮೀಳಾ ಭರತ್‌, ಶಾರದಮ್ಮ, ಮುಖಂಡರಾದ ಬಿ.ಪಿ. ಮಂಜುನಾಥ್‌, ಆರ್‌. ರಘು, ಬೋರೇಗೌಡ, ಜಗದೀಶ್‌, ಹೇಮಂತ್‌ಕುಮಾರ್‌ಗೌಡ, ಬಾಲಕೃಷ್ಣ, ಶರತ್‌, ಶಂಕರ್‌ ಮೊದಲಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next