Advertisement

ರೂಪಾ ವರ್ಗ, ಶರತ್‌ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

05:25 AM Jul 20, 2017 | Team Udayavani |

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿರುವ ಭ್ರಷ್ಟಾಚಾರ ಬೆಳಕಿಗೆ ತಂದ ಡಿಐಜಿ ರೂಪಾ ವರ್ಗಾವಣೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಹತ್ಯೆ ಪ್ರಕರಣ ಸೇರಿದಂತೆ ಕಾಂಗ್ರೆಸ್‌ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾದ್ಯಂತ ಬುಧವಾರ ಪ್ರತಿಭಟನೆ ನಡೆಸಿದೆ.

Advertisement

ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಶಾಸಕರು ಮತ್ತು ಪಕ್ಷದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು,ಶರತ್‌ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಳಪಡಿಸಬೇಕು ಮತ್ತು ಜೈಲಿನಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಹೈಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಸರ್ಕಾರದ ವೋಟ್‌ ಬ್ಯಾಂಕ್‌ ರಾಜಕಾರ ಣದಿಂದಾಗಿ ಇಸ್ಲಾಂ ಮೂಲಭೂತವಾದಿ ಸಂಘಟನೆಗಳ ಬಗ್ಗೆ ಮೃದು ಧೋರಣೆ ಅನುಸರಿಸಲಾಗುತ್ತಿದೆ. ಇದರಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ, ಹತ್ಯೆಯತ್ನ
ಪ್ರಕರಣಗಳು ನಡೆಯುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರ ವಿಫ‌ಲವಾಗಿದೆ ಎಂದು ಆರೋಪಿಸಿದರು.

ವರ್ಗಾವಣೆ ಕುರಿತು ಸ್ಪಷ್ಟನೆ ನೀಡಿ: ಬೆಂಗಳೂರಿನ ಮೌರ್ಯ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಜೈಲಿನ ಅಕ್ರಮಗಳ ಬಗ್ಗೆ ವರದಿ ಸಲ್ಲಿಸಿದರೆ ಅಕ್ರಮ ತಡೆಗಟ್ಟಲು ಕ್ರಮ ಕೈಗೊಳ್ಳುವ ಬದಲು ವರದಿ ನೀಡಿದ ಡಿಐಜಿ ರೂಪಾ ಅವರನ್ನು ವರ್ಗಾವಣೆ ಮಾಡುವ ಮೂಲಕ ಈ ಸರ್ಕಾರ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎನ್ನುವಂತೆ ವರ್ತಿಸಿದೆ. ಜೈಲಿನ ಅಕ್ರಮಗಳ ಕುರಿತು ತನಿಖೆ ಪೂರ್ಣಗೊಳ್ಳುವ ಮೊದಲೇ ವರದಿ ನೀಡಿದ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಕುರಿತು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಹತ್ಯೆಯ ತನಿಖೆ ನಡೆಸಲಾಗುತ್ತಿದೆ ಎಂದು ಹೇಳುತ್ತಾ ಸರ್ಕಾರ ಜಾರಿಕೊಳ್ಳುತ್ತಿದ್ದು, ಹತ್ಯೆ ಹಿಂದಿನ ಸತ್ಯಾಂಶ ಹೊರಬಂದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್‌ಐಎ ಮೂಲಕ ನಡೆಸುವ ಕುರಿತು ಕೇಂದ್ರ ಗೃಹ ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ಹೇಳಿದರು.

Advertisement

ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ, ಶಾಸಕ ಮುನಿರಾಜು, ಪಕ್ಷದ ರಾಜ್ಯ ಉಪಾಧ್ಯಕ್ಷ ಕೆ.ಪಿ.ನಂಜುಂಡಿ ಪಾಲ್ಗೊಂಡಿದ್ದರು.

ಶೋಭಾ ಬರೆದ ಪತ್ರದಲ್ಲಿ ಲೋಪ
ಬೆಂಗಳೂರು:
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣಗಳ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಸಂಸದೆ ಶೋಭಾ ಕರಂದ್ಲಾಜೆ ಬರೆದಿರುವ ಪತ್ರದಲ್ಲಿ ಜೀವಂತ ಇರುವ ವ್ಯಕ್ತಿಯ ಹೆಸರನ್ನು ಹತ್ಯೆಗೀಡಾದವರ ಪಟ್ಟಿಯಲ್ಲಿ ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ.

4 ವರ್ಷದಲ್ಲಿ ರಾಜ್ಯದಲ್ಲಿ 23 ಹಿಂದೂ ಕಾರ್ಯಕರ್ತರ ಹತ್ಯೆ ನಡೆದಿದ್ದು, ಹಲವರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಈ ಪತ್ರದಲ್ಲಿ ಹಲ್ಲೆಗೊಳಗಾದವರ ಪಟ್ಟಿಯಲ್ಲಿ ಇರಬೇಕಾಗಿದ್ದ ಅಶೋಕ್‌ ಪೂಜಾರಿ ಹೆಸರನ್ನು ಹತ್ಯೆಯಾದವರ ಪಟ್ಟಿಯಲ್ಲಿ ಸೇರಿಸಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ಆಗಿರುವ ಲೋಪದ ಬಗ್ಗೆ ವಿಷಾದಿಸಿದ್ದಾರೆ. ಅಲ್ಲದೆ, ಈಗಾಗಲೇ ಈ ಲೋಪವನ್ನು ಕೇಂದ್ರದ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next