Advertisement

ರಾಜ್ಯದಲ್ಲಿ ಕಾನೂನು ವೈಫ‌ಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

12:39 PM Mar 09, 2018 | Team Udayavani |

ಮಂಡ್ಯ: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‌ ಶೆಟ್ಟಿ ಅವರ ಕೊಲೆ ಯತ್ನ ಹಾಗೂ ರಾಜ್ಯ ಸರ್ಕಾರದ ಕಾನೂನು ವೈಫ‌ಲ್ಯ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

Advertisement

ಬಿಜೆಪಿ ನಗರ ಘಟಕದ ಅಧ್ಯಕ್ಷ ಎಚ್‌.ಆರ್‌.ಅರವಿಂದ್‌ ನೇತೃತ್ವದಲ್ಲಿ ಸರ್‌ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಮಾವಣೆಗೊಂಡ ಕಾರ್ಯಕರ್ತರು, ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫ‌ಲವಾಗಿದೆ. ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ವಿದ್ವತ್‌ ಮೇಲೆ ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ ಸಿಎಂ ಸಿದ್ದರಾಮಯ್ಯ ಆಪ್ತ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ ಘಟನೆಗಳು ಮರುಕಳಿಸುತ್ತಲೇ ಇವೆ. ಆದರೂ ಸಿಎಂ ಸಿದ್ದರಾಮಯ್ಯ ಅವರು ಗೃಹ ಸಚಿವರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಲೋಕಾಯುಕ್ತವನ್ನು ನಿಷ್ಕ್ರಿಯಗೊಳಿಸಿ ಕೊಲೆ ಮಾಡಿತ್ತು. ಕಾಂಗ್ರೆಸ್‌ನವರು ಭ್ರಷ್ಟಾಚಾರ ಮುಕ್ತಗೊಳಿಸುವ ಸಲುವಾಗಿ ಲೋಕಾಯುಕ್ತ ಸಂಸ್ಥೆಗಿದ್ದ ಶಕ್ತಿಯನ್ನು ಕಿತ್ತುಕೊಂಡು ಆ ಜಾಗದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಸ್ತಿತ್ವಕ್ಕೆ ತಂದರು.

Advertisement

ರಾಜಕಾರಣಿಗಳ ವಿರುದ್ಧ ವಿಚಾರಣೆ ನಡೆಸುವ ಸ್ವಾತಂತ್ರ್ಯ ಕಿತ್ತುಕೊಳ್ಳಲಾಯಿತು. ಲೋಕಾಯುಕ್ತ ಸಂಸ್ಥೆಗೆ ಅಧಿಕಾರದ ಶಕ್ತಿ ನೀಡಿದ್ದಲ್ಲಿ ಕಾಂಗ್ರೆಸ್‌ ಸರ್ಕಾರದಲ್ಲಿದ್ದ ಹಲವಾರು ಮಂದಿ ಜೈಲುಪಾಲಾಗುತ್ತಿದ್ದರು ಎಂದು ಹೇಳಿದರು.

ಈ ನಡುವೆ ದೈಹಿಕವಾಗಿ ಲೋಕಾಯುಕ್ತ ನ್ಯಾ.ವಿಶ್ವನಾಥ್‌ ಶೆಟ್ಟಿ ಅವರ ಕೊಲೆಗೆ ಯತ್ನ ನಡೆದಿರುವುದು ದುರಂತ. ಸ್ವಲ್ಪವಾದರೂ ನೈತಿಕತೆ, ಮನಃಸಾಕ್ಷಿ, ಆತ್ಮಗೌರವ ಇದ್ದರೆ ಕೂಡಲೇ ಸಿಎಂ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ ಕಾರ್ಯಕರ್ತರು,

ರಾಜ್ಯದಲ್ಲಿ ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದರೂ ಯಾವುದರಲ್ಲಿ ನಂ.1 ಎಂಬುದನ್ನು ಹೇಳಬೇಕು ಎಂದು ಫ್ಲೆಕ್ಸ್‌ ಪ್ರದರ್ಶಿಸಿ ಟೀಕಿಸಿದರು. ಪ್ರತಿಭಟನೆಯಲ್ಲಿ ಎಂ.ಬಿ.ರಮೇಶ್‌, ನೆರಳು ಕೃಷ್ಣ, ವರದರಾಜು, ಶಿವಕುಮಾರ್‌ ಆರಾಧ್ಯ, ಪುಟ್ಟಸ್ವಾಮಿ, ರೇಣುಕಾಸ್ವಾಮಿ, ರಾಜೇಶ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next