ಮೈಸೂರು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ರಾಜಕೀಯ ಲಾಭಕ್ಕಾಗಿ ದೇಶದ ಜನತೆಗೆ ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿ ಮೈಸೂರು ನಗರ ಬಿಜೆಪಿ ಘಟಕವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯಹಾರ ನಡೆದಿದೆ ಎಂದು ಸುಪ್ರೀಂಕೋರ್ಟ್‌ನಲ್ಲಿ ನಾಲ್ಕು ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ, ನ್ಯಾಯಮೂರ್ತಿಗಳು ವಿಮಾನ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ.
ಖರೀದಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆದಿದ್ದು, ಈ ಆರೋಪದಲ್ಲಿ ಯಾವುದೇ ತಿರುಳಿಲ್ಲ ಎಂದು ಅರ್ಜಿಗಳನ್ನು ವಜಾ ಮಾಡಿದ್ದರೂ ರಾಹುಲ್ ಗಾಂಧಿ ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಆರೋಪ ಮಾಡುತ್ತ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.
ರಾಹುಲ್ ಗಾಂಧಿ ಓರ್ವ ಜನಪ್ರತಿನಿಧಿಯಾಗಿ ದೇಶದ ಭದ್ರತೆಯ ವಿಚಾರವನ್ನು ನ್ಯಾಯಾಲಯಕ್ಕೆ ಎಳೆದು ತಂದಿದ್ದಲ್ಲದೆ ದೇಶದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕುತ್ತಿದ್ದಾರೆ. ಹೀಗಾಗಿ ಕೂಡಲೇ ಅವರು ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆಯಾಚನೆ ಮಾಡಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ರಾಜೇಂದ್ರ, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್, ಸುರೇಶ್ ಬಾಬು, ನರಸಿಂಹರಾಜ ಕ್ಷೇತ್ರ ಅಧ್ಯಕ್ಷ ಮುರಳಿ, ಚಾಮರಾಜ ಕ್ಷೇತ್ರದ ಅಧ್ಯಕ್ಷ ಶ್ರೀರಾಮ್, ಮಾಧ್ಯಮ ಪ್ರಮುಖ್ ಪ್ರಭಾಕರ್ ಶಿಂಧೆ, ಎಸ್.ಸಿ. ಮೋರ್ಚಾ ಕಾರ್ಯದರ್ಶಿ ಗಿರಿಧರ್, ನಗರಪಾಲಿಕೆ ಸದಸ್ಯರಾದ ಅಶ್ವಿನಿ ಶರತ್, ಪ್ರಮೀಳಾ, ಸತೀಶ್,ಲಕ್ಷ್ಮೀ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.