ಬೆಂಗಳೂರು: ಬಿಜೆಪಿ ಬಂಡಾಯದ ಬೇಗುದಿ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಇಲ್ಲ ಎಂಬ ವಾತಾವರಣ ನಿರ್ಮಾಣವಾಗಿದ್ದು, ಸದ್ಯದಲ್ಲೇ ಈ ವಿವಾದ ದಿಲ್ಲಿ ಅಂಗಳಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ನೇಮಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಡಿಸೆಂಬರ್ 7ರಂದು ದಿಲ್ಲಿಗೆ ತೆರಳುವ ಸಾಧ್ಯತೆ ಇದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವರು ಸಮಯ ಕೇಳಿದ್ದು, ತಮ್ಮ ಚುನಾವಣಾ ಸೋಲಿಗೆ ಸಂಬಂಧಪಟ್ಟಂತೆ ಕೆಲ ದಾಖಲೆಗಳನ್ನು ವರಿಷ್ಠರ ಮುಂದೆ ಮಂಡಿಸುವ ಸಾಧ್ಯತೆ ಇದೆ. ಸೋಮಣ್ಣ ಜತೆಗೆ ಇನ್ನೆಷ್ಟು ಮಂದಿ ಕೈ ಜೋಡಿಸಲಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ರಮೇಶ್ ಜಾರಕಿಹೊಳಿ ಜತೆಗೆ ತೆರಳುತ್ತಾರೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.
ಇದೆಲ್ಲದರ ಮಧ್ಯೆ ಸೋಮಣ್ಣಗಿಂತಲೂ ಮುಂಚಿತವಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದಿಲ್ಲಿಗೆ ತೆರಳುವ ಸಾಧ್ಯತೆ ಇದೆ.
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೆ ಮುನ್ನವೇ ಭೇಟಿಗೆ ಅವಕಾಶ ನೀಡುವಂತೆ ವಿಜಯೇಂದ್ರ ಸಮಯ ಕೇಳಿದ್ದಾರೆ.
ಡಿಸೆಂಬರ್ 3 ಅಥವಾ 4ರಂದು ಅವರು ದಿಲ್ಲಿಗೆ ತೆರಳುವ ಸಾಧ್ಯತೆ ಇದ್ದು, ನಡ್ಡಾ ಹಾಗೂ ಅಮಿತ್ ಶಾ ಭೇಟಿ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಒಟ್ಟಾರೆ ಬೆಳವಣಿಗೆ ಬಗ್ಗೆ ವರಿಷ್ಠರ ಗಮನ ಸೆಳೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.