ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸುವತ್ತ ಹೆಜ್ಜೆ ಇಡುವ ಮೂಲಕ ಸರ್ಕಾರ ರಚನೆಯ ಬಗ್ಗೆ ರಾಜಕೀಯ ಚಟುವಟಿಕೆ ಗರಿಗೆದರಿದೆ. 288 ಸದಸ್ಯ ಬಲ ಹೊಂದಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 145 ಸ್ಥಾನದ ಅಗತ್ಯವಿದೆ. ಸದ್ಯದ ಫಲಿತಾಂಶದಲ್ಲಿ ಬಿಜೆಪಿ-ಶಿವಸೇನಾ ಮೈತ್ರಿ 163 ಸ್ಥಾನಗಳಲ್ಲಿ ಜಯ ಸಾಧಿಸುವತ್ತ ಹೆಜ್ಜೆ ಹಾಕಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಮಾಡಿಕೊಂಡು ಅಖಾಡಕ್ಕಿಳಿದಿತ್ತು. ಆ ಪ್ರಕಾರ ಸೀಟು ಹಂಚಿಕೆ ಮಾಡಿಕೊಂಡ ಬಿಜೆಪಿ 164 ಕ್ಷೇತ್ರಗಳಲ್ಲಿ, ಶಿವಸೇನಾ 124 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಬಿಜೆಪಿ 150 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, 14 ಕ್ಷೇತ್ರಗಳಲ್ಲಿ ಎನ್ ಡಿಎ ಮೈತ್ರಿಪಕ್ಷಕ್ಕೆದ ಅಭ್ಯರ್ಥಿಗಳಿಗೆ ಸ್ಥಾನ ನೀಡಿತ್ತು.
ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 105 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಶಿವಸೇನಾ 65 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದೀಗ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನಾ ನಡುವೆ ರಾಜಕೀಯ ಚಟುವಟಿಕೆ ಗರಿಗೆದರುವಂತೆ ಮಾಡಿದೆ. 2014ರಲ್ಲಿ ಬಿಜೆಪಿ ಜತೆ ಮುನಿಸಿಕೊಂಡ ಶಿವಸೇನಾ ಏಕಾಂಗಿಯಾಗಿಯೇ ಚುನಾವಣಾ ಅಖಾಡಕ್ಕಿಳಿದಿತ್ತು. 2014ರಲ್ಲಿ ಬಿಜೆಪಿ 260 ಸ್ಥಾನಗಳಲ್ಲಿ ಸ್ಪರ್ಧಿಸಿ 122ರಲ್ಲಿ ಗೆಲುವು ಪಡೆದಿತ್ತು. ಶಿವಸೇನಾ 282 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 63ರಲ್ಲಿ ಜಯಗಳಿಸಿತ್ತು. ಈ ಬಾರಿ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದ್ದರು ಬಿಜೆಪಿಗೆ ಹೆಚ್ಚಿನ ಸ್ಥಾನ ಲಾಭವಾಗಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.
2014ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ-ಶಿವಸೇನಾ ಮೈತ್ರಿಗೆ 24 ಸ್ಥಾನ ಕಳೆದುಕೊಂಡಿದ್ದರೆ, ಕಾಂಗ್ರೆಸ್-ಎನ್ ಸಿಪಿಗೆ ಲಾಭವಾಗಿದೆ. ಕಾಂಗ್ರೆಸ್ ಪಕ್ಷ 27 ಸ್ಥಾನಗಳಲ್ಲಿ ಜಯ ಗಳಿಸಿದ್ದು, ನ್ಯಾಷನಲ್ ಕಾಂಗ್ರೆಸ್ ಪಕ್ಷ 29ರಲ್ಲಿ ಗೆಲುವು ಸಾಧಿಸಿತ್ತು. 2019ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಎನ್ ಸಿಪಿ ಮೈತ್ರಿ 92 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 40 ಸ್ಥಾನಗಳಲ್ಲಿ, ಎನ್ ಸಿಪಿ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.