ನವದೆಹಲಿ:ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಡಳಿತದ ಪಶ್ಚಿಮಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 200ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ(ಫೆ.21, 2021) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕೊಡಗಿನಲ್ಲಿ ಆಲಿಕಲ್ಲು ಮಳೆ: ಕಾಫಿ, ಹಸಿರುಮೆಣಸು ಕೃಷಿಕರು ಕಂಗಾಲು | Udayavani
ಜೀ ನ್ಯೂಸ್ ಚಾನೆಲ್ ಗೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿರುವ ಶಾ, ಸಿಎಎ, ಅಲ್ಪಸಂಖ್ಯಾತರ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮಮತಾ ಬ್ಯಾನರ್ಜಿ ಕಾನೂನು ಸುವ್ಯವಸ್ಥೆ ಹೇಗೆ ಕಾಪಾಡಿಕೊಂಡಿದ್ದರು ಸೇರಿದಂತೆ ಹಲವಾರು ವಿಷಯಗಳ ಕುರಿತು ತಿಳಿಸಿದರು.
ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಪೂರ್ಣ ನಂಬಿಕೆಯನ್ನು ಇಟ್ಟಿದ್ದಾರೆ. ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ಆದರೆ ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಸಕಾರಾತ್ಮಕ ಬದಲಾವಣೆ ತರುವಲ್ಲಿ ವಿಫಲವಾಗಿದೆ ಎಂದು ಶಾ ಆರೋಪಿಸಿದರು.
ಚುನಾವಣೆ ನಡೆಯಲಿರುವ ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಇನ್ನೂ ಕೂಡಾ ಪ್ರಭಾವ ಹೊಂದಿದ್ದಾರಲ್ಲ ಎಂಬ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ ಆಡಳಿತದ ಪಶ್ಚಿಮಬಂಗಾಳದಲ್ಲಿ ಅಪಾಯಕಾರಿ ರಾಜಕೀಯ ವಾತಾವರಣ ಇದೆ. ಈ ಹಿನ್ನಲೆಯಲ್ಲಿ ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದರು.
ಪಶ್ಚಿಮಬಂಗಾಳದಲ್ಲಿ ಯಾರೊಬ್ಬರು ಸುರಕ್ಷಿವಲ್ಲ ಎಂದ ಶಾ, ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜಕೀಯ ದುರುದ್ದೇಶದಿಂದ ಹಾಗೂ ಹಿಂಸಾಚಾರದಲ್ಲಿ ಶಾಮೀಲಾದವರನ್ನು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಒಂದು ವೇಳೆ ಅಧಿಕಾರಕ್ಕೆ ಬಂದರೆ ಪಶ್ಚಿಮಬಂಗಾಳದಲ್ಲಿನ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವುದು ಭಾರತೀಯ ಜನತಾ ಪಕ್ಷದ ಪ್ರಮುಖ ಆದ್ಯತೆಯಾಗಿದೆ. ಅಲ್ಲದೇ ಅಲ್ಪಸಂಖ್ಯಾಕರ ತುಷ್ಠೀಕರಣದಲ್ಲಿ ತೊಡಗಿರುವ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಶಾ ಆಕ್ರೋಶ ವ್ಯಕ್ತಪಡಿಸಿದರು.
ಸಮುದಾಯ, ರಾಜಕೀಯ ಹಿಂಸಾಚಾರ ಪಶ್ಚಿಮಬಂಗಾಳದ ರಾಜಕೀಯದ ಅವಿಭಾಜ್ಯ ಅಂಗವಾಗಿದೆ ಎಂದು ಆರೋಪಿಸಿದ ಶಾ, ಪಶ್ಚಿಮಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂಬ ವಿಶ್ವಾಸ ದೃಢವಾಗಿದೆ ಎಂದರು.