Advertisement

ರಾಜಕೀಯವಾಗಿಯೇ ತಿರುಗೇಟು ನೀಡಲು ಬಿಜೆಪಿ ನಿರ್ಧಾರ

06:45 AM Aug 19, 2017 | |

ಬೆಂಗಳೂರು: ಮುಂಬರುವ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಇನ್ನಷ್ಟು ತೀವ್ರಗತಿಯಲ್ಲಿ ಹೋರಾಟ ನಡೆಸುವುದರೊಂದಿಗೆ, ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸೇರಿ ಮುಖಂಡರ ವಿರುದಟಛಿ
ಪ್ರಕರಣಗಳನ್ನು ದಾಖಲಿಸುತ್ತಿರುವ ಸರ್ಕಾರಕ್ಕೆ ರಾಜಕೀಯವಾಗಿಯೇ ತಿರುಗೇಟು ನೀಡಲು ಬಿಜೆಪಿ ಕೋರ್‌ ಕಮಿಟಿ ನಿರ್ಧರಿಸಿದೆ.
 
ಬಿ.ಎಸ್‌.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆದ ಸಭೆಯಲ್ಲಿ ಈ ಕುರಿತು ಸುದೀರ್ಘ‌ ಚರ್ಚೆ ನಡೆಸಲಾಯಿತು. ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಸೂಚನೆಯಂತೆ ಒಗ್ಗಟ್ಟಿನ ಪ್ರದರ್ಶನ ನೀಡುವ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ, ಅದರಲ್ಲೂ ಸಿಎಂ ಸಿದ್ದರಾಮಯ್ಯ ವಿರುದ್ಧ ಸರಣಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ.

Advertisement

ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ಎಸಿಬಿ ಎಫ್ಐಆರ್‌ ದಾಖಲಿಸಿರುವುದು ಮತ್ತು ಇನ್ನಷ್ಟು ಬಿಜೆಪಿ ಮುಖಂಡರ ವಿರುದಟಛಿ ತನಿಖೆ ನಡೆಸುವ ಬಗ್ಗೆ ಸರ್ಕಾರ ಯೋಚಿಸುತ್ತಿರುವ ಬಗ್ಗೆ ಸಭೆಯಲ್ಲಿ ಸುದೀರ್ಘ‌ ಚರ್ಚೆ ನಡೆಸಲಾಗಿದೆ. ರಾಜ್ಯ ಸರ್ಕಾರ ರಾಜಕೀಯ ಪ್ರೇರಿತವಾಗಿ ಇಂತಹ ಕ್ರಮ ಕೈಗೊಳ್ಳುತ್ತಿರುವುದರಿಂದ ಮುಖಂಡರ ಪರವಾಗಿ ಪಕ್ಷ ಸದೃಢವಾಗಿ ನಿಂತು ಕಾನೂನು ಹೋರಾಟದ ಜತೆಗೆ ರಾಜಕೀಯ ಹೋರಾಟಗಳನ್ನೂ ನಡೆಸುವ ಬಗ್ಗೆಯೂ ಸಭೆ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್‌ ಶಾ ಪಕ್ಷ ಸಂಘಟನೆ ಮತ್ತು ವಿಧಾನಸಭೆ ಚುನಾವಣೆ ಕುರಿತಂತೆ ಮುಖಂಡರಿಗೆ ಕೆಲವು
ಕಾರ್ಯಭಾರಗಳನ್ನು ವಹಿಸಿದ್ದು, ಅದಕ್ಕೆ ಪೂರಕವಾಗಿ ಒಟ್ಟಾಗಿ ಕೆಲಸ ಮಾಡುವ ಮೂಲಕ ಒಗ್ಗಟ್ಟುಪ್ರದರ್ಶಿಸುವಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ರಾಜ್ಯದ ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಶುಕ್ರವಾರದಿಂದ ಆರಂಭಗೊಂಡಿರುವ ಆಂದೋಲನದ ಅಂಗವಾಗಿ ಆ. 22ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ಪಂಜಿನ ಮೆರವಣಿಗೆ ನಡೆಸಲು ತೀರ್ಮಾನಿಸಲಾಗಿದೆ. ಜತೆಗೆ ಮುಂದಿನ ಹಂತದಲ್ಲಿ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಪ್ರತಿಭಟನಾ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ಬರಪೀಡಿತ ತಾಲೂಕುಗಳು ಯಾವುವು, ಇದಕ್ಕೆ ಪರಿಹಾರವೇನು ಎಂಬ ಕುರಿತು ಸರ್ಕಾರ ಘೋಷಣೆ ಮಾಡ
ಬೇಕು. ಸತತ 3 ವರ್ಷಗಳ ಕಾಲ ಬರ ಪರಿಸ್ಥಿತಿ ಮುಂದುವರಿದಿರುವುದರಿಂದ ಮುಂಬರುವ ದಿನಗಳಲ್ಲಿ ರೈತರ ಸಂಕಷ್ಟ ಇನ್ನಷ್ಟು ಹೆಚ್ಚುವ ಸನ್ನಿವೇಶವಿದೆ. ರೈತರ ಆತ್ಮಹತ್ಯೆ ತಪ್ಪಿಸಲು ಸರ್ಕಾರ ಯೋಜನೆಗಳನ್ನು ರೂಪಿಸಬೇಕು. ಇದರಲ್ಲಿ ವಿಫ‌ಲವಾದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಲಿಂಬಾವಳಿ ಹೇಳಿದರು.

Advertisement

ಮಂಗಳೂರು ಚಲೋಗೆ ನಿರ್ಧಾರ
ಮಂಗಳೂರಿನಲ್ಲಿ ನಡೆದ ಶರತ್‌ ಹತ್ಯೆಯಲ್ಲಿ ಕೆಎಫ್ಡಿ ಮತ್ತು ಪಿಎಫ್ಐ ಸಂಘಟನೆಗಳ ಪಾತ್ರ ಇರುವುದು ಪೊಲೀಸರ ತನಿಖೆಯಿಂದ ದೃಢಪಟ್ಟಿದ್ದು, ಈ ಸಂಘಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಅರಣ್ಯ ಸಚಿವ ಬಿ.ರಮಾನಾಥ ರೈ ಅವರ ರಾಜೀನಾಮೆಗೆ ಒತ್ತಾಯಿಸಿ ಮಂಗಳೂರು ಚಲೋ ಹಮ್ಮಿಕೊಳ್ಳುವುದು, ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡದೇ ಇದ್ದಲ್ಲಿ ಉಗ್ರ ಸ್ವರೂಪದ ಪ್ರತಿಭಟನೆ ನಡೆಸುವ ಬಗ್ಗೆ ಚರ್ಚಿಸಲಾಗಿದ್ದು, ಮಂಗಳೂರು ಚಲೋ ಕುರಿತು ಶೀಘ್ರವೇ ದಿನಾಂಕ ನಿಗದಿಪಡಿಸಲಾಗುವುದು. ಇದರೊಂದಿಗೆ ಪಿಎಫ್ಐ ಮತ್ತು ಕೆಎಫ್ಡಿ ಸಂಘಟನೆಗಳನ್ನು ನಿಷೇಧಿಸುವಂತೆ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅರವಿಂದ ಲಿಂಬಾವಳಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next