ಬೆಂಗಳೂರು:ರಾಜಕೀಯ ತಂತ್ರಗಾರಿಕೆ ಭಾಗವಾಗಿ ಕಾಂಗ್ರೆಸ್ ಪಟ್ಟಿ ಬಿಡುಗಡೆಗಾಗಿ ಕಾದು ಕುಳಿತಿರುವ ಬಿಜೆಪಿ ಎರಡನೇ ಪಟ್ಟಿ ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿದ್ದು, ಯಡಿಯೂರಪ್ಪ, ಅನಂತಕುಮಾರ್ ಸೇರಿದಂತೆ ರಾಜ್ಯ ನಾಯಕರು ದೆಹಲಿ ತಲುಪಿದ್ದಾರೆ.
ಭಾನುವಾರ ದೆಹಲಿಯಲ್ಲಿ ಬಿಜೆಪಿ ಕೇಂದ್ರ ಚುನಾವಣೆ ಸಮಿತಿ ಸಭೆ ನಿಗದಿಯಾಗಿದ್ದು, ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ರಾಜ್ಯ ಪ್ರವಾಸ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚಿಸಿದ್ದರು. ಅದರಂತೆ ಪಟ್ಟಿ ಸಿದ್ಧಪಡಿಸಲಾಗಿದ್ದು ಸಭೆಯಲ್ಲಿ ಚರ್ಚಿಸಿ ಅಂತಿಮಗೊಳ್ಳಲಿದೆ ಎಂದು ಹೇಳಲಾಗಿದೆ.
ಈ ಮಧ್ಯೆ, ಸುದ್ದಿಗಾರರ ಜತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಸದ್ಯದಲ್ಲೆ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
ಈಗಾಗಲೇ 72 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಎರಡನೇ ಹಂತದಲ್ಲಿ 128 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ನಂತರ ಉಳಿದ 24 ಕ್ಷೇತ್ರಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದರು.
ಅಭ್ಯರ್ಥಿಗಳ ಆಯ್ಕೆ ಸಂಬಂಧ ದೆಹಲಿಗೆ ಹೋಗುತ್ತಿದ್ದೇನೆ.ರಾಜ್ಯ ನಾಯಕರು ಬರಲಿದ್ದಾರೆ. ಭಾನುವಾರ ಕೇಂದ್ರ ಚುನಾವಣೆ ಸಮಿತಿ ಸಭೆ ನಡೆಯಲಿದ್ದು ನಂತರ ಪಟ್ಟಿ ಅಂತಿಮಗೊಳ್ಳಲಿದೆ ಎಂದು ತಿಳಿಸಿದರು.
ಶನಿವಾರ ಟಿಕೆಟ್ ಆಕಾಂಕ್ಷಿಗಳು ಯಡಿಯೂರಪ್ಪ ನಿವಾಸದ ಮುಂದೆ ಜಮಾಯಿಸಿ ಟಿಕೆಟ್‌ಗಾಗಿ ಬೇಡಿಕೆ ಇಟ್ಟರು.ಎಲ್ಲರನ್ನೂ ಸಮಾಧಾನದಿಂದಲೇ ಮಾತನಾಡಿದ ಯಡಿಯೂರಪ್ಪ, ಪಕ್ಷ 150 ಸೀಟು ಗೆಲ್ಲುವ ಗುರಿ ಹೊಂದಿದ್ದು, ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.