ಮಂಗಳೂರು: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವುದರಿಂದ ಪಕ್ಷ ಸಂಘಟನೆ ಹಾಗೂ ಪಕ್ಷದ ತಳಮಟ್ಟದ ಪದಾಧಿಕಾರಿಗಳಿಗೆ ಚುರುಕು ಮುಟ್ಟಿಸುವ ಉದ್ದೇಶದಿಂದ ಸೋಮವಾರ ನಗರ ಹೊರವಲಯದ ಅಡ್ಯಾರ್ ಗಾರ್ಡನ್‌ನಲ್ಲಿ ದ.ಕ. ಜಿಲ್ಲಾ ಬಿಜೆಪಿ ಶಕ್ತಿಕೇಂದ್ರದ ಪ್ರಮುಖರ ಸಭೆ ನಡೆಯಿತು.
ರಾಷ್ಟ್ರೀಯ ಸಂಘಟ್ಜ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸುಮಾರು 2 ಗಂಟೆಗಳ ಕಾಲ ಮಾತನಾಡಿದರು.
ಯಾವ ಸಂದರ್ಭದಲ್ಲಿ ಚುನಾವಣೆ ಘೋಷಣೆಯಾದರೂ ಎದುರಿಸಲು ತಾಕತ್ತು ಇರುವುದು ಬಿಜೆಪಿಗೆ ಮಾತ್ರ. ಕಾರಣ ಬೂತ್ ಮಟ್ಟದಲ್ಲಿ ನಿರಂತರವಾಗಿ ಜನಸಂಪರ್ಕ ಕಾರ್ಯ ನಡೆಸುತ್ತಿರುವುದು. ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಗೊಳಿಸಲು ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ ಅವರು, ಈ ಕುರಿತು ಶಕ್ತಿ ಕೇಂದ್ರದ ಪ್ರಮುಖರು ಮಾಡಬೇಕಾದ ಕೆಲಸಗಳ ಕುರಿತು ತಿಳಿಸಿದರು.
ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಂಘಟ್ಜ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ., ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಭಾರಿ ಭಾರತೀಶ್ ಉಪಸ್ಥಿತರಿದ್ದರು.
ದ.ಕ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು 500ರಷ್ಟು ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.
ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷ ತಿಲಕ್‌ರಾಜ್ ಕೃಷ್ಣಾಪುರ ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ಜಯಶ್ರೀ ವಂದಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು ನಿರ್ವಹಿಸಿದರು.