ಬೆಂಗಳೂರು: ಕೊರೊನಾ ಪೀಡಿತರು ಮತ್ತು ಗುಣಮುಖರಲ್ಲಿ ಬ್ಲ್ಯಾಕ್ ಫಂಗಸ್ ಹೆಚ್ಚು ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೊಸ ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಯಲ್ಲಿ 7, ಕೋಲಾರದಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ. ತಜ್ಞರ ಸಮಿತಿಯ ಪ್ರಕಾರ ವಾರಕ್ಕೆ 400ಕ್ಕೂ ಅಧಿಕ ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗುತ್ತಿದೆ.
ಗುರುವಾರ ಫಂಗಸ್ ಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶನಿವಾರ ಸಂಜೆ ಬೆಂಗಳೂರಿ ನಲ್ಲಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ 12 ಜನರಲ್ಲಿ ಬ್ಲ್ಯಾಕ್ ಫಂಗಸ್ ಕಂಡುಬಂದಿದ್ದು, ನಾಲ್ವರು ಗುಣಮುಖರಾಗಿದ್ದರೆ ಉಳಿದವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ನಾಲ್ವರಲ್ಲಿ ಇದೇ ಕಾಯಿಲೆ ಪತ್ತೆಯಾಗಿದೆ.
ಬ್ಲ್ಯಾಕ್ ಫಂಗಸ್ ತಗಲಿದವರಿಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡುತ್ತಿದ್ದು, ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ತಿಳಿಸಿದ್ದಾರೆ.
ಮೂರ್ನಾಲ್ಕು ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗುತ್ತಿದೆ. ಇದಕ್ಕೆ ಯಾವ ಬಗೆಯ ಚಿಕಿತ್ಸೆ ನೀಡಬೇಕೆಂದು ಈ ಸಮಿತಿ ಸಲಹೆ ನೀಡಲಿದೆ. ಇದಕ್ಕೆ ಬೇಕಿರುವ ಆಂಪೊಟೆರಿಸಿನ್ ಔಷಧವನ್ನು ಕೇಂದ್ರ ಸರಕಾರ ನೀಡಲಿದ್ದು, 20 ಸಾವಿರ ಡೋಸ್‌ಗೆ ಮನವಿ ಮಾಡಲಾಗಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಸತತ ಏಳು ವಾರಗಳ ಕಾಲ ನೀಡಬೇಕಿದ್ದು, 2-3 ಲಕ್ಷ ರೂ. ಖರ್ಚಾಗುತ್ತದೆ. ಇದನ್ನು ಉಚಿತವಾಗಿ ನೀಡಲು ಸಿಎಂ ಜತೆಗೆ ಚರ್ಚಿಸಲಾಗುವುದು ಎಂದರು.