Advertisement

ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗಾಗಿ ಬೋರ್ಡ್‌ ಪರೀಕ್ಷೆ: ಹೈಕೋರ್ಟ್‌ನಲ್ಲಿ ಸರಕಾರ ಸಮರ್ಥನೆ

12:37 AM Mar 14, 2024 | Team Udayavani |

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗೆ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್‌ ಮಟ್ಟದ ಮೌಲ್ಯಾಂಕನ ಪರೀಕ್ಷೆಯನ್ನು ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮುಂದಾಗಿದೆ ಎಂದು ಹೈಕೋರ್ಟ್‌ನ ವಿಭಾಗೀಯ ಪೀಠದ ಎದುರು ರಾಜ್ಯ ಸರಕಾರದ ಪರ ವಕೀಲರು ವಾದ ಮಂಡಿಸಿದ್ದಾರೆ. ಗುರುವಾರ (ಮಾ.14) ಕೂಡ ವಿಚಾರಣೆ ಮುಂದುವರಿಯಲಿದೆ.

Advertisement

ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8 ಮತ್ತು 9 ತರಗತಿಗಳಿಗೆ ಬೋರ್ಡ್‌ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಸಂಬಂಧ ತಾನು ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸಿತ್ತು.

ಏಕಸದಸ್ಯ ಪೀಠದ ಆದೇಶಕ್ಕೆ ಮಧ್ಯಾಂತರ ತಡೆಯಾಜ್ಞೆ ನೀಡಿ ಪರೀಕ್ಷೆ ನಡೆಸಲು ಹೈಕೋರ್ಟ್‌ ಅವಕಾಶ ಕಲ್ಪಿಸಿತ್ತು. ಆದರೆ ಪರೀಕ್ಷೆಗೆ ಅವಕಾಶ ಕಲ್ಪಿಸಿದ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳು, ಪರೀಕ್ಷೆಗೆ ತಡೆಯಾಜ್ಞೆ ಪಡೆದುಕೊಂಡಿದ್ದವು. ಆದರೆ ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಅನುವು ಮಾಡಿಕೊಟ್ಟಿತ್ತು.

ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್‌ ಮತ್ತು ರಾಜೇಶ್‌ ಕೆ. ರೈ ಅವರಿದ್ದ ನ್ಯಾಯಪೀಠ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದೆ. ರಾಜ್ಯ ಪಠ್ಯಕ್ರಮ ಅಳವಡಿಸಿರುವ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆ ಬೋರ್ಡ್‌ ಪರೀಕ್ಷೆಗೆ ಮುಂದಾಗಿದೆ ಎಂದು ಸರಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ ವಾದ ಮಂಡಿಸಿದರು.

ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಗುರುವಾರಕ್ಕೆ ಮಂದೂಡಿದೆ. ಸುಪ್ರೀಂ ಕೋರ್ಟ್‌ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಈಗಾಗಲೇ ಮುಂದೂಡಿದೆ.

Advertisement

ಸರಕಾರಿ ದಾವೆ ವಿಭಾಗದ ಹಂಗಾಮಿ ನಿರ್ದೇಶಕ
ಎಚ್‌.ಕೆ.ಜಗದೀಶ್‌ ನೇಮಕ ಹೈಕೋರ್ಟ್‌ನಿಂದ ರದ್ದು
ಬೆಂಗಳೂರು: ಪ್ರಾಸಿಕ್ಯೂಷನ್‌ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖಾ ನಿರ್ದೇಶನಾಲಯದ ಹಂಗಾಮಿ ನಿರ್ದೇಶಕರಾಗಿದ್ದ ಎಚ್‌.ಕೆ.ಜಗದೀಶ್‌ ಅವರ ನೇಮಕಾತಿಯನ್ನು ಹೈಕೋರ್ಟ್‌ ರದ್ದುಪಡಿಸಿದ್ದು, ನಿಯಮಗಳಿಗೆ ಅನುಗುಣವಾಗಿ ಅರ್ಹರನ್ನು ಕೂಡಲೇ ನೇಮಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಅಪರಾಧ ಪ್ರಕ್ರಿಯಾ ಸಂಹಿತೆ(ಸಿಆರ್‌ಪಿಸಿ) ಹಾಗೂ ಶ್ರೇಣಿ ಮತ್ತು ನೇಮಕಾತಿ ನಿಯಮಗಳಿಗೆ ವಿರುದ್ಧವಾಗಿ 2019ರ ಆ.5ರಂದು ಜಗದೀಶ್‌ ಅವರನ್ನು ಪ್ರಾಸಿಕ್ಯೂಷನ್‌ ಮತ್ತು ಸರಕಾರಿ ದಾವೆ ವಿಭಾಗದ ಹಂಗಾಮಿ ನಿರ್ದೇಶಕರನ್ನಾಗಿ ನೇಮಕ ಮಾಡಿರುವುದನ್ನು ವಜಾ ಮಾಡುವಂತೆ ಕೋರಿ ವಕೀಲ ಸುಧಾ ಕಟ್ವಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾ| ಎನ್‌.ವಿ.ಅಂಜಾರಿಯಾ ಮತ್ತು ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ನೇತೃತ್ವದ ವಿಭಾಗೀಯ ಪೀಠವು ಪುರಸ್ಕರಿಸಿದೆ.

ಸರಕಾರದ ಆದೇಶದ ಪ್ರಕಾರ ಹಂಗಾಮಿ ನಿರ್ದೇಶಕರು 1 ವರ್ಷದ ಬಳಿಕ ಮುಂದುವರಿಯುವಂತಿಲ್ಲ. ಪದೋನ್ನತಿ ಪಡೆಯಲು ಅರ್ಹತೆ ಇಲ್ಲದ ವ್ಯಕ್ತಿಯನ್ನು ಹಂಗಾಮಿ ಹುದ್ದೆಗೆ ನೇಮಕ ಮಾಡುವಂತಿಲ್ಲ. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಹಮತಿ ಇಲ್ಲದೆ ಹುದ್ದೆಗೆ ಯಾರನ್ನೂ ನೇಮಿಸುವಂತಿಲ್ಲ. ಹೀಗಾಗಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಹಂಗಾಮಿ ನಿರ್ದೇಶಕರನ್ನು ವಜಾ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next