ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಐಟಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಸಂಬಂಧ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೂರ್ವ ವಿಭಾಗದ ಪೊಲೀಸರು ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ಐಟಿ ಕಚೇರಿ ಆವರಣದಲ್ಲಿರುವ ಪ್ರತಿಯೊಂದು ಕಚೇರಿ ಮತ್ತು ಕೊಠಡಿಗಳನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದ್ದಾರೆ. ಆದರೆ ಯಾವುದೇ ಸ್ಫೋಟಕ ವಸ್ತುವಾಗಲಿ ಅಥವಾ ಸಂಶಯಾಸ್ಪದ ವಸ್ತುವಾಗಲಿ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಸಂದೇಶ ಎಂಬುದು ಖಾತ್ರಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.