ನವದೆಹಲಿ: ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಾಂಕರ್ ದತ್ತ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.
ನ್ಯಾ. ದತ್ತ ಅವರ ಪ್ರಮಾಣವಚನದ ನಂತರ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಲಿದೆ. ಸಿಜೆಐ ಸೇರಿ ಒಟ್ಟು 34 ನ್ಯಾಯಮೂರ್ತಿಗಳ ನೇಮಕಕ್ಕೆ ಅನುಮೋದನೆ ಇದೆ.
ನ್ಯಾಯಮೂರ್ತಿಗಳ ನೇಮಕ ಮತ್ತು ಕೊಲೀಜಿಯಂ ವ್ಯವಸ್ಥೆಯ ಬಗ್ಗೆ ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವೆ ನಡೆಯುತ್ತಿರುವ ಶೀತಲ ಸಮರದ ನಡುವೆಯೇ ಈ ಬೆಳವಣಿಗೆ ನಡೆದಿದೆ.
1965ರ ಫೆ.9ರಂದು ಜನಿಸಿದ ದೀಪಾಂಕರ್ ದತ್ತ ಅವರನ್ನು ಕೋಲ್ಕತ್ತಾ ಹೈಕೋರ್ಟ್‌ನ ಖಾಯಂ ನ್ಯಾಯಮೂರ್ತಿಯಾಗಿ 2006ರ ಜೂ.22ರಂದು ಬಡ್ತಿ ನೀಡಲಾಯಿತು.
ನಂತರ 2020ರ ಏ.28ರಂದು ಅವರನ್ನು ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಯಿತು. ನ್ಯಾ. ದತ್ತ ಅವರು ಕೋಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ದಿ. ಸಲೀಲ್ ಕುಮಾರ್ ದತ್ತಾ ಅವರ ಪುತ್ರರಾಗಿದ್ದಾರೆ.