ಬೆಂಗಳೂರು : ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಮುಂದಾಗಿರುವ ಕೇಂದ್ರ ಸರಕಾರದ ಕ್ರಮವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ.
ಟ್ವೀಟರ್ ನಲ್ಲಿ ಈ ಮಾಹಿತಿ ಹಂಚಿಕೋಂಡಿರುವ ರಾಹುಲ್ ಗಾಂಧಿ, ಕೇಂದ್ರ ಸರಕಾರ ನಾನು ನೀಡಿದ ಸಲಹೆಯನ್ನು ಒಪ್ಪಿಕೊಂಡಿದೆ. ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರಕಾರ ಒಪ್ಪಿಕೊಂಡಿರುವುದು ಸರಿಯಾದ ಕ್ರಮ. ಕೋವಿಡ್ ನಿಯಂತ್ರಣದಲ್ಲಿ ಇದು ಸರಿಯಾದ ಹೆಜ್ಜೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಲಸಿಕೆ ಹಾಗೂ ಬೂಸ್ಟರ್ ಡೋಸ್ ದೇಶದ ಪ್ರತಿಯೊಬ್ಬ ಪ್ರಜೆಯನ್ನು ಸುರಕ್ಷಿತವಾಗಿ ತಲುಪಬೇಕು ಎಂದೂ ಅವರು ಸಲಹೆ ನೀಡಿದ್ದಾರೆ. ಮುಂಚೂಣಿ ಸೇವೆಯಲ್ಲಿರುವ ಸಿಬ್ಬಂದಿಗೆ ಕೋವಿಡ್ ನಿಯಂತ್ರಣ ಕ್ರಮವಾಗಿ ಬೂಸ್ಟರ್ ಡೋಸ್ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೆ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಕೋವಿಡ್ ಮೊದಲನೇ ಅಲೆ ಸಂದರ್ಭದಲ್ಲಿ ತಾವು ನೀಡಿದ್ದ ಸಲಹೆಗಳನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಈ ಹಿಂದೆ ರಾಹುಲ್ ಗಾಂಧಿ ಆರೋಪಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.